ನವದೆಹಲಿ: ಕಳೆದ 37 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಸಿಜೆಪಿ (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ನಡೆದ ಮಹತ್ವದ ಮಾತುಕತೆಯ ಬಳಿಕ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಸಿಜೆಪಿ ಘೋಷಿಸಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಸರ್ಕಾರದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ನಂತರ ಸಿಜೆಪಿ ವಕ್ತಾರ ಸೌರವ್ ದಾಸ್ ಈ ಘೋಷಣೆ ಮಾಡಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ, ಪೇಪರ್ ಲೀಕ್ ತಡೆಗೆ ಕಠಿಣ ಕಾನೂನು ಹಾಗೂ ಪಾರದರ್ಶಕ ನೇಮಕಾತಿ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು .ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಪರಿಶೀಲಿಸಿ ಹಿಂಪಡೆಯುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ "ಸದ್ಭಾವನೆಯ ಆಧಾರದ ಮೇಲೆ ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ" ಎಂದು ಸಿಜೆಪಿ ನಾಯಕತ್ವ ಘೋಷಿಸಿದೆ.
ದೇಶಾದ್ಯಂತ ವಿದ್ಯಾರ್ಥಿಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆ ಕಳೆದ ಕೆಲವು ವಾರಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಈಗ ಸರ್ಕಾರದ ಭರವಸೆಯೊಂದಿಗೆ ಹೋರಾಟ ಅಂತ್ಯಗೊಂಡಿದ್ದು, ಪ್ರತಿಭಟನಾಕಾರರು ಶಾಂತಿಯುತವಾಗಿ ಮನೆಗಳಿಗೆ ಮರಳುವಂತೆ ಸಿಜೆಪಿ ಮನವಿ ಮಾಡಿದೆ.