ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಭಾನುವಾರ ರಾತ್ರಿ ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್, ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಸುಮಾರು ರಾತ್ರಿ 11 ಗಂಟೆ ವೇಳೆಗೆ ಮಾತುಕತೆ ನಡೆಸಿದರು. ಸಚಿವ ಸಂಪುಟ ಪುನರ್‌ರಚನೆ, ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ವರದಿಯಾಗಿದೆ.
ಆಗಸ್ಟ್ 13ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳಿಸುವ ಒತ್ತಡ ಸರ್ಕಾರದ ಮೇಲಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ಖರ್ಗೆ ಭೇಟಿ ಮಹತ್ವ ಪಡೆದುಕೊಂಡಿದೆ. ಖರ್ಗೆ ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಖಾತೆ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಏನು ಸೂಚನೆ ನೀಡುತ್ತದೆಯೋ ಅದನ್ನು ಪಾಲಿಸಲಾಗುವುದು ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ. ಅಗತ್ಯಬಿದ್ದರೆ ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲ ಖಾತೆಗಳ ಬಗ್ಗೆಯೂ ತಾನೊಬ್ಬರೇ ಉತ್ತರಿಸುವುದಾಗಿ ತಿಳಿಸಿದ್ದಾರೆ.
ಸಂಪುಟದಲ್ಲಿ ಮತ್ತಷ್ಟು ಬದಲಾವಣೆ ಸಾಧ್ಯತೆ?
ಇದರ ನಡುವೆ ಸಚಿವ ಸಂಪುಟದಲ್ಲಿ ಮತ್ತಷ್ಟು ಬದಲಾವಣೆಗಳ ಸಾಧ್ಯತೆಯೂ ಚರ್ಚೆಗೆ ಬಂದಿದೆ. ನೂತನ ಸಚಿವರಾದ ಎಚ್.ಸಿ. ಬಾಲಕೃಷ್ಣ ಹಾಗೂ ಬಿ. ನಾಗೇಂದ್ರ ಅವರನ್ನು ಕೈಬಿಟ್ಟು, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಕೈಗೊಳ್ಳಲಾಗಿಲ್ಲ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಖಾತೆ ಹಂಚಿಕೆ ವಿಳಂಬವಾಗಿರುವುದು ಹಾಗೂ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಕಾಂಗ್ರೆಸ್‌ಗೆ ಸವಾಲಾಗಿ ಪರಿಣಮಿಸಿದೆ. ಇದೀಗ ಡಿಕೆ ಶಿವಕುಮಾರ್ ಅವರು ಖರ್ಗೆ ಸೇರಿದಂತೆ ಹೈಕಮಾಂಡ್ ನಾಯಕರೊಂದಿಗೆ ನಡೆಸುತ್ತಿರುವ ಮಾತುಕತೆಗಳು ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವುದರಿಂದ ಅದಕ್ಕೂ ಮುನ್ನ ಖಾತೆ ಹಂಚಿಕೆ ಮತ್ತು ಸಂಪುಟಕ್ಕೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಬೀಳಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.