ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪ್ರಶ್ನಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದಾಶಿವನಗರದ ಖಾಲಿ ನಿವೇಶನವೊಂದರ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವೇಳೆ ಶಾಸಕ ಮುನಿರತ್ನ ಹಾಗೂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ವಿಡಿಯೋದಲ್ಲಿರುವ ದೃಶ್ಯಗಳ ಪ್ರಕಾರ, ವಾಗ್ವಾದದ ವೇಳೆ ಯುವಕ ಶಾಸಕ ಮುನಿರತ್ನ ಅವರ ಕತ್ತಿನ ಪಟ್ಟಿ ಹಿಡಿದಿದ್ದಾನೆ ಎನ್ನಲಾಗಿದೆ. ಮುನಿರತ್ನ ಅವರು ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂದು ಯುವಕ ಆರೋಪಿಸಿದ್ದು, ತನ್ನ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಪ್ರಶ್ನಿಸಿ ತಾನು ಆಕ್ಷೇಪ ವ್ಯಕ್ತಪಡಿಸಿದ್ದಾಗಿ ಹೇಳಿಕೊಂಡಿದ್ದಾನೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಕೆಲವರು ತಮ್ಮ ಮೊಬೈಲ್ಗಳಲ್ಲಿ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ.
ಜಟಾಪಟಿ ತೀವ್ರಗೊಳ್ಳುತ್ತಿದ್ದಂತೆ ಮುನಿರತ್ನ ಅವರು ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದಂತೆ ಕಂಡುಬಂದಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಘಟನೆಯ ಕುರಿತು ಸಾರ್ವಜನಿಕರು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.