ಚೆನ್ನೈ: ನಟಿ ತ್ರಿಷಾ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಡಿಎಂಕೆ ಶಾಸಕ ಹಾಗೂ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.
ಮಂಗಳವಾರ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ವಿಚಾರಣೆ ಪೂರ್ಣಗೊಳಿಸಿದ ಬಳಿಕ ಅವರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿತ್ತು. ಜೊತೆಗೆ ತನಿಖೆಗೆ ಅಗತ್ಯವಿರುವ ಸಂದರ್ಭದಲ್ಲಿ ಸಹಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಟ್ರಿಷಾ ಅವರನ್ನು ಉಲ್ಲೇಖಿಸಿ ಉದಯನಿಧಿ ಸ್ಟಾಲಿನ್ ಮಾಡಿದರೆನ್ನಲಾದ ‘ಡಬಲ್ ಮೀನಿಂಗ್’ ಹೇಳಿಕೆ ತಮಿಳುನಾಡಿನಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ವಿವಿಧ ಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಉದಯನಿಧಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು.
ಬಂಧನದ ಬಳಿಕ ಡಿಎಂಕೆ ನಾಯಕರು ಇದನ್ನು ರಾಜಕೀಯ ಪ್ರೇರಿತ ಕ್ರಮ ಎಂದು ಆರೋಪಿಸಿದರೆ, ಆಡಳಿತಾರೂಢ ಟಿವಿಕೆ ಸೇರಿದಂತೆ ಹಲವು ನಾಯಕರು ಉದಯನಿಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿಯಲಿದ್ದು, ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಉದಯನಿಧಿಗೆ ಸೂಚಿಸಲಾಗಿದೆ.