Search


ವಿದ್ಯಾರ್ಥಿಗಳ ಬೆಂಬಲಕ್ಕೆ ಇಳಿದ ಅಣ್ಣ ಹಜಾರೆ; ಮುಂಬೈನಲ್ಲಿ ಮೌನ ಪ್ರತಿಭಟನೆ

ದೇಶದ್ಯಂತ ವಿದ್ಯಾರ್ಥಿಗಳು ಕೈಗೊಂಡಿರುವ ಪ್ರತಿಭಟನೆಗೆ ಅಣ್ಣಾ ಹಜಾರೆ ಬೆಂಬಲ ಸೂಚಿಸಿ ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಅವರು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ, ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಉಳಿಸಬೇಕಾದರೆ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನವದೆಹಲಿ ಸೇರಿದಂತೆ ದೇಶದಾದ್ಯಂತ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ವಿದ್ಯಾರ್ಥಿಗಳ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಸಮಾಜಸೇವಕ ಅಣ್ಣಾ ಹಜಾರೆ ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಿದ್ದಾರೆ.

ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿರುವ ತಮ್ಮ ಗ್ರಾಮದಲ್ಲಿ ಮೌನ ಪ್ರತಿಭಟನೆ ಆರಂಭಿಸಿದ ಅಣ್ಣಾ ಹಜಾರೆ, "ವಿದ್ಯಾರ್ಥಿಗಳು ದೇಶದ ಭವಿಷ್ಯ. ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಲಾಠಿ ಮತ್ತು ಬಲಪ್ರಯೋಗದಿಂದ ಹತ್ತಿಕ್ಕುವುದು ಸರಿಯಲ್ಲ" ಎಂದು ಹೇಳಿದ್ದಾರೆ. ಅವರು ಕೇಂದ್ರ ಸರ್ಕಾರವನ್ನು ಉದ್ದೇಶಿಸಿ, ಪರೀಕ್ಷಾ ಅಕ್ರಮಗಳ ಕುರಿತು ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದರು. 

ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಅವರ ಭವಿಷ್ಯವನ್ನು ಸುರಕ್ಷಿತಗೊಳಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಣ್ಣಾ ಹಜಾರೆ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ವಿವಿಧ ಕ್ಷೇತ್ರಗಳ ಗಣ್ಯರು ಬೆಂಬಲ ಸೂಚಿಸುತ್ತಿದ್ದು, ಅಣ್ಣಾ ಹಜಾರೆ ಅವರ ಬೆಂಬಲದಿಂದ ಈ ಹೋರಾಟಕ್ಕೆ ಮತ್ತಷ್ಟು ನೈತಿಕ ಬಲ ಸಿಕ್ಕಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

By Ravikumar - 24-07-2026


Ads in Post