ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ದೇಶದ ಪರೀಕ್ಷಾ ವ್ಯವಸ್ಥೆಯ ಗಂಭೀರ ವೈಫಲ್ಯ ಎಂದು ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆಯೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಇತ್ತೀಚಿಗೆ ಬಿಜೆಪಿಗೆ ರಾಜೀನಾಮೆ ಕೊಟ್ಟು ತಮಿಳುನಾಡಿನಲ್ಲಿ ಹೊಸ ಪರ್ವ ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ 'ಅಣ್ಣಾಮಲೈ ಅವರು, ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ತಾವು ಹೇಳುತ್ತಿಲ್ಲ. ಆದರೆ ಪದೇ ಪದೇ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಘಟನೆಗಳಿಗೆ ಹೊಣೆಗಾರಿಕೆ ನಿಗದಿಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸ ಮರುಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು.
ಬಿಜೆಪಿ ತೊರೆದ ನಂತರ ಅಣ್ಣಾಮಲೈ ಅವರು ಕೇಂದ್ರದ ಕೆಲವು ನೀತಿಗಳನ್ನ ನೇರವಾಗಿ ಟೀಕಿಸುತ್ತಿದ್ದು, ನೀಟ್ ಮರು ಪರೀಕ್ಷೇ ವಿಧಾನವನ್ನು ಅಣ್ಣಾಮಲೈ ಟೀಕಿಸಿದ್ದರು. ಈ ಟೀಕೆಗಳ ನಡುವೆ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಹೆಚ್ಚಾಗಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಪರೀಕ್ಷಾ ಭದ್ರತೆಯನ್ನು ಬಲಪಡಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ.