ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಯತ್ನಿಸಿದ್ದು, ಬಳಿಕ ಆಕೆ ಬದುಕುಳಿದ ಬೆನ್ನಲ್ಲೇ ತನ್ನ ಪ್ರೇಯಸಿ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಗೋಳಿಹೊಳೆಯ ಚಾರ್ತಾಲಿ ಗ್ರಾಮದ ವಿಠಲ ನಾಯ್ಕ್ (35) ಮತ್ತು ಭವ್ಯ (33) ಎಂದು ಗುರುತಿಸಲಾಗಿದೆ.
ಆಟೋ ಚಾಲಕನಾಗಿದ್ದ ವಿಠಲ ನಾಯ್ಕ್ ಹಾಗೂ ಟೈಲರ್ ವೃತ್ತಿ ಮಾಡುತ್ತಿದ್ದ ಭವ್ಯ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸುಮಾರು 20 ದಿನಗಳ ಹಿಂದೆ ವಿಠಲ ತನ್ನ ಪ್ರೇಯಸಿ ಭವ್ಯ ಅವರನ್ನು ನರ್ಸ್ ಎಂದು ಗರ್ಭಿಣಿ ಪತ್ನಿಗೆ ಪರಿಚಯಿಸಿದ್ದ. ಬಳಿಕ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ, ಭವ್ಯ ಜೊತೆ ಊರು ಬಿಟ್ಟು ಪರಾರಿಯಾಗಿದ್ದ ಎನ್ನಲಾಗಿದೆ.
ವಿಷದ ಇಂಜೆಕ್ಷನ್ನಿಂದ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿ ಚೇತರಿಸಿಕೊಳ್ಳುತ್ತಿದ್ದರು.
ಇತ್ತ ಸೌಪರ್ಣಿಕ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ವಿಠಲ ನಾಯ್ಕ್ ಹಾಗೂ ಭವ್ಯ ಅವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರ ಶವಗಳು ಕೊಳೆತ ಸ್ಥಿತಿಯಲ್ಲಿದ್ದವು ಎಂದು ತಿಳಿದುಬಂದಿದೆ. ಪತ್ನಿ ಬದುಕುಳಿದಿರುವ ವಿಷಯ ತಿಳಿದ ಬಳಿಕ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
