ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ವಿರುದ್ಧ CJP ಮುಖಂಡ ಅಭಿಜಿತ್ ದೀಪ್ಕೆ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ ಹಿರಿಯರು ತಮ್ಮ ಸಾರ್ವಜನಿಕ ಚಟುವಟಿಕೆಗಳಿಂದ ಹಿಂದೆ ಸರಿದು ಯುವಕರಿಗೆ ಅವಕಾಶ ನೀಡಬೇಕು ಎಂದು ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಅಣ್ಣಾ ಹಜಾರೆ ಅವರ ಹೆಸರನ್ನು ಉಲ್ಲೇಖಿಸಿ ಮಾತನಾಡಿದ ಅವರು, ವಯಸ್ಸಾದವರು ನಿವೃತ್ತರಾಗಿ ಆಶ್ರಮಕ್ಕೆ ತೆರಳಿ ಯುವ ಪೀಳಿಗೆಗೆ ಅವಕಾಶ ಕಲ್ಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೀಪ್ಕೆ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ನಾಯಕ ಅಮಿತ್ ಮಾಳವೀಯ, ಅಣ್ಣಾ ಹಜಾರೆ ಅವರಂತಹ ಹಿರಿಯ ಸಾಮಾಜಿಕ ಕಾರ್ಯಕರ್ತರ ಬಗ್ಗೆ ಇಂತಹ ಭಾಷೆ ಬಳಸುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ. ರಾಜಕೀಯ ಅಥವಾ ಸಾಮಾಜಿಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಮಾತನಾಡುವಾಗ ಕನಿಷ್ಠ ಶಿಷ್ಟಾಚಾರವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಯುವಜನರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದ ಪ್ರತಿಭಟನೆಗಳಿಗೆ ಅಣ್ಣಾ ಹಜಾರೆ ಬೆಂಬಲ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಟೀಕಿಸಿ ದೀಪ್ಕೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಣ್ಣಾ ಹಜಾರೆ ಅವರ ಸಾರ್ವಜನಿಕ ಜೀವನ ಹಾಗೂ ಯುವಜನರ ಹೋರಾಟಗಳಿಗೆ ಅವರ ಬೆಂಬಲದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.