Search


ಕಳೆದ ಮೈಸೂರು ದಸರಾ ವೇಳೆ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಮೈಸೂರು: ಕಳೆದ ವರ್ಷದ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮೈಸೂರಿನ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯವು ಈ ಮಹತ್ವದ ತೀರ್ಪು ಪ್ರಕಟಿಸಿದೆ.

ಮೈಸೂರಿನ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಪಿ. ವಘಾಢೆ ಅವರು ಪ್ರಕರಣದ ವಿಚಾರಣೆ ನಡೆಸಿ, ಕಾರ್ತಿಕ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಯ ಮೇಲಿನ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ.

ಕಳೆದ ವರ್ಷ ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ಮೈಸೂರಿನ ದಸರಾ ವಸ್ತುಪ್ರದರ್ಶನದ ಸಮೀಪ ಟೆಂಟ್‌ನಲ್ಲಿ ವಾಸ್ತವ್ಯ ಹೂಡಿತ್ತು. ಕುಟುಂಬದ ಸದಸ್ಯರೆಲ್ಲರೂ ನಿದ್ರಿಸುತ್ತಿದ್ದ ವೇಳೆ ಬಾಲಕಿಯನ್ನು ಅಲ್ಲಿಂದ ಕರೆದೊಯ್ದ ಕಾರ್ತಿಕ್, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಈ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು, ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ್ದರು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯವು ಕಾರ್ತಿಕ್‌ನ ಅಪರಾಧವನ್ನು ಸಾಬೀತುಪಡಿಸಿ, ಇದೀಗ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ.

By Ravikumar - 17-10-2026


Ads in Post