ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಅರ್ಹ ಫಲಾನುಭವಿಗಳ ಹಿತಕಾಯುವ ಜೊತೆಗೆ ಅನರ್ಹರನ್ನು ಯೋಜನೆಯಿಂದ ಹೊರಗಿಡುವ ಸಂಬಂಧ ಮುಖ್ಯಮಂತ್ರಿ ಶ್ರೀ DK Shivakumar ಅವರು ಕೆಲವು ಸೂಚನೆಗಳನ್ನು ನೀಡಿದರು. ಅವುಗಳೆಂದರೆ;
* ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳಿಂದ ಆಗುತ್ತಿರುವ ದುರುಪಯೋಗಕ್ಕೆ ಮಾತ್ರ ಬ್ರೇಕ್ ಹಾಕಬೇಕು.
* ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು.
* ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿತ್ತು.
* ಮೃತಪಟ್ಟಿರುವ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಹಣ ಹೋಗುತ್ತಿರುವುದು ಪತ್ತೆಯಾಗಿದೆ. ಮುಂದೆ ಈ ರೀತಿ ದುರುಪಯೋಗ ಆಗಬಾರದು.
* ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್ ಮೆಸ್ಸೇಜ್ ಮೂಲಕ ಖಚಿತಪಡಿಸಬೇಕು.
* ಏರ್ಟೆಲ್ ಆ್ಯಪ್ ಬ್ಯಾಂಕ್ನಲ್ಲಿ (ಏರ್ಟೆಲ್ ಸಿಮ್ ಬಳಕೆದಾರರಿಗೆ ಅವಕಾಶವಿರುವ ಖಾತೆ) ಯುಪಿಐ ಖಾತೆಗಳನ್ನು ತೆರೆದು ದುರುಪಯೋಗ ಮಾಡಿಕೊಳ್ಳುತ್ತಿದ್ದಲ್ಲಿ, ಅಂತಹ ಪ್ರಕರಣಗಳು ಪತ್ತೆ ಸೂಕ್ತ ಕ್ರಮ ವಹಿಸಬೇಕು.
* ಖಾತೆಗಳು ಕರ್ನಾಟಕ ರಾಜ್ಯದಲ್ಲಿ ಮಾತ್ರ ಇರಬೇಕು. ಇತರೆ ರಾಜ್ಯಗಳಲ್ಲಿರುವ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದೆ. ಇವುಗಳಿಗೆ ತಡೆ ಹಾಕಬೇಕು.
* ನಮ್ಮ ರಾಜ್ಯದ ಯೋಜನೆಗಳು ನಮ್ಮ ರಾಜ್ಯದ ಫಲಾನುಭವಿಗಳಿಗೆ ಮಾತ್ರ ಸಿಗಬೇಕು. ಇತರೆ ರಾಜ್ಯದ ಮತದಾರರಿಗೆ ಯೋಜನೆಯ ಲಾಭ ಆಗುತ್ತಿದೆ. ಇದನ್ನು ತಡೆಯಬೇಕು.
* ಅನುಕೂಲಸ್ಥರು ಯಾರಾದರೂ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟು ಕೊಡುವ ಮೂಲಕ ಇತರೆ ಅರ್ಹ ಫಲಾನುಭವವಿಗಳಿಗೆ ನೆರವಾಗಲು ಮುಂದಾದರೆ ಅಂಥವರನ್ನು ಪ್ರೋತ್ಸಾಹಿಸಬೇಕು.
* ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಕಂಡುಬರುತ್ತಿರುವ ಎರಡು ಪ್ರಮುಖ ತಾಂತ್ರಿಕ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಆದಷ್ಟು ಬೇಗ ಪರಿಹರಿಸಬೇಕು.
* ಮರಣ ಹೊಂದಿದ ಫಲಾನುಭವಿಗಳ ಸಂಖ್ಯೆ ಸಕಾಲದಲ್ಲಿ ದೊರೆಯದಿರುವ ಬಗ್ಗೆ ಇ-ಕೆವೈಸಿ ಹಾಗೂ ಬ್ಯಾಂಕ್ ಖಾತೆ/ಎನ್.ಪಿ.ಸಿ.ಐ ನಿಷ್ಕ್ರಿಯವಾಗಿರುವ ಫಲಾನುಭವಿಗಳ ಕುರಿತು ಅಗತ್ಯ ಕ್ರಮ ವಹಿಸಬೇಕು.
* ಅಕೌಂಟೆಂಟ್ ಜನರಲ್ ವರದಿಯಲ್ಲಿ ಉಲ್ಲೇಖವಾಗಿರುವ ಈ ಕೆಳಗಿನ ಸಂಗತಿಗಳ ಕೂಡ ಅತ್ಯಂತ ಗಂಭೀರವಾಗಿವೆ.
* ಒಂದೇ ಖಾತೆಯಲ್ಲಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಮೂರು ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ಹೋಗಿದೆ ಎನ್ನುವ ಬಗ್ಗೆ ಎಜಿ ಅವರ ವರದಿ ಬಂದಿದೆ.
* ಒಬ್ಬರೇ ಹಲವು ಖಾತೆಗಳನ್ನು ನೋಂದಾಯಿಸಿರುವುದನ್ನು ಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಈ ರೀತಿಯಾದಂಥ ಯೋಜನೆಯ ದುರ್ಬಳಕೆಯನ್ನು ಆದಷ್ಟು ಶೀಘ್ರ ತಡೆಬೇಕು.
* ಶಕ್ತಿ ಯೋಜನೆಯಡಿ ಮೇ ಅಂತ್ಯದವರೆಗೆ ಮಹಿಳೆಯರು 763 ಕೋಟಿ ಬಾರಿ ಪ್ರಯಾಣ ಮಾಡಿದ್ದು, ಅವರಿಗೆ ವಿನಿಯೋಗಿಸಲಾದ ಟಿಕೆಟ್ ಮೌಲ್ಯ 20,047.69 ಕೋಟಿ ರೂಪಾಯಿಗಳು. ಇಷ್ಟು ದೊಡ್ಡ ಮಟ್ಟದಲ್ಲಿ ಯೋಜನೆ ಯಶಸ್ವಿಯಾಗಿರುವುದು ಸಂತಸದ ವಿಚಾರ.
* 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಅಂದಾಜಿಸಲಾಗಿದೆ.
* ಗೃಹ ಜ್ಯೋತಿ ಯೋಜನೆಯಡಿ ಮೇ ಅಂತ್ಯದವರೆಗೆ 1.65 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆದಿರುತ್ತಾರೆ.
* ಹೊರ ರಾಜ್ಯದಿಂದ ಇಲ್ಲಿಗೆ ಬಂದು ನೆಲೆಸಿ ಗೃಹ ಜ್ಯೋತಿ ಲಾಭ ಪಡೆಯುತ್ತಿರುವವರ ಮಾಹಿತಿ ಸಂಗ್ರಹಿಸಿ, ಕ್ರಮವಹಿಸಬೇಕು.
* ಮತಪಟ್ಟಿಯಲ್ಲಿ ಹೆಸರಿರುವ ಮತದಾರರು ಮಾತ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ.
ಆದ್ದರಿಂದ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಫಲಾನುಭವಿಗಳ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು.
* ಅನ್ನಭಾಗ್ಯ ಯೋಜನೆಯಡಿ 11,561 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಜುಲೈ-2023 ಯಿಂದ ಡಿಸೆಂಬರ್-2024ರ ವರೆಗೆ ಒಟ್ಟು 72,02,33,970 ಫಲಾನುಭವಿಗಳಿಗೆ ಒಟ್ಟು ರೂ. 11,561.05 ಕೋಟಿಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿರುತ್ತದೆ.
* 2025ನೇ ಫೆಬ್ರವರಿ ತಿಂಗಳಿನಿಂದ ಇಲ್ಲಿಯವರೆಗೆ ಪ್ರಸ್ತುತರಾಜ್ಯದಲ್ಲಿರುವ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ. ಇದು ಸಹ ಒಂದು ಐತಿಹಾಸಿಕ ಸಾಧನೆ
* ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟವಾಗುತ್ತಿರುವುದನ್ನು ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಬೇಕು ಎಂಬುದು ನಮ್ಮ ಸರ್ಕಾರದ ಒಟ್ಟಾರೆ ಆಶಯವಾದರೂ, ಅವುಗಳ ದುರ್ಬಳಕೆಯನ್ನು ತಪ್ಪಿಸುವುದು ಸಹ ನಮ್ಮ ಕರ್ತವ್ಯ ಎಂಬುದನ್ನು ಮರೆಯಬಾರದು.