ನವದೆಹಲಿ: ಭಾರತದಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಕ್ಸಿ ಪಾಲ್ಗೊಳ್ಳಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ. ಈ ಮೂಲಕ ಹಲವು ದಿನಗಳಿಂದ ಮುಂದುವರಿದಿದ್ದ ಅವರ ಭಾರತ ಭೇಟಿಯ ಕುರಿತ ಅನಿಶ್ಚಿತತೆಗೆ ತೆರೆ ಬಿದ್ದಿದೆ.
ಕ್ಸಿ ಜಿನ್ಪಿಂಗ್ ಅವರ ಭಾರತ ಭೇಟಿಯನ್ನು ಈ ಹಿಂದೆ ಚೀನಾ ಸರ್ಕಾರ ಅಧಿಕೃತವಾಗಿ ಖಚಿತಪಡಿಸಿರಲಿಲ್ಲ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾ-ಕುನ್ ಕೂಡ ಭೇಟಿಯ ಕುರಿತು ಸ್ಪಷ್ಟ ಮಾಹಿತಿ ನೀಡಲು ನಿರಾಕರಿಸಿದ್ದರು. ಇದೀಗ ಅಧಿಕೃತ ಘೋಷಣೆ ಹೊರಬಿದ್ದಿರುವುದರಿಂದ ಭಾರತ-ಚೀನಾ ರಾಜತಾಂತ್ರಿಕ ಸಂಬಂಧಗಳ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ.
2020ರ ಗಾಲ್ವಾನ್ ಕಣಿವೆ ಗಡಿ ಸಂಘರ್ಷದ ಬಳಿಕ ಭಾರತ ಮತ್ತು ಚೀನಾ ನಡುವಿನ ಸಂಬಂಧದಲ್ಲಿ ಸಾಕಷ್ಟು ಬಿಕ್ಕಟ್ಟು ಉಂಟಾಗಿತ್ತು. ಈ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಮೃತಪಟ್ಟಿದ್ದರು. ಅದರ ಬಳಿಕ ಕ್ಸಿ ಜಿನ್ಪಿಂಗ್ ಭಾರತಕ್ಕೆ ಭೇಟಿ ನೀಡಿರಲಿಲ್ಲ. 2019ರಲ್ಲಿ ಕೊನೆಯ ಬಾರಿ ಭಾರತಕ್ಕೆ ಬಂದಿದ್ದ ಅವರು, ಚೆನ್ನೈ ಸಮೀಪದ ಮಾಮಲ್ಲಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.
ಕ್ಸಿ ಜಿನ್ಪಿಂಗ್ 2014ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದರು. ನಂತರ 2016ರಲ್ಲಿ ಗೋವಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲೂ ಪಾಲ್ಗೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಭಾರತ-ಚೀನಾ ಸಂಬಂಧಗಳಲ್ಲಿ ಕೆಲವು ಸುಧಾರಣೆಯ ಲಕ್ಷಣಗಳು ಕಂಡುಬಂದಿದ್ದು, ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿಯೂ ಕೆಲವು ನಿರ್ಬಂಧಗಳನ್ನು ಭಾರತ ಸಡಿಲಿಸಿದೆ. ಈ ಹಿನ್ನೆಲೆಯಲ್ಲಿ ಕ್ಸಿ ಅವರ ಭಾರತ ಭೇಟಿ ಎರಡು ದೇಶಗಳ ನಡುವಿನ ಸಂಬಂಧಕ್ಕೆ ಹೊಸ ತಿರುವು ನೀಡುವ ನಿರೀಕ್ಷೆ ಮೂಡಿಸಿದೆ.