Search


ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: KSCA ಮುಂದೆ ಕ್ಲೀನ್‌ಚಿಟ್ ವರದಿ ಸುಡುವುದಾಗಿ ಆರ್‌. ಅಶೋಕ್ ಎಚ್ಚರಿಕೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಸರ್ಕಾರದ ನಡೆ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ನಿಜವಾದ ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಸರ್ಕಾರ ನೀಡಿರುವ ಕ್ಲೀನ್‌ಚಿಟ್ ವರದಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಕಚೇರಿ ಎದುರು ಸುಟ್ಟು ಹಾಕುವುದಾಗಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 11 ಅಮಾಯಕರು ಪ್ರಾಣ ಕಳೆದುಕೊಂಡಂತಹ ದುರಂತದಲ್ಲಿ ಜವಾಬ್ದಾರಿಯುತ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಸರ್ಕಾರ ತನಿಖೆಯನ್ನು ಪಾರದರ್ಶಕವಾಗಿ ನಡೆಸದೆ, ಕೆಲವರನ್ನು ರಕ್ಷಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆಯೂ ಮಾತನಾಡಿದ ಅಶೋಕ್, ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವುದು ಕೇವಲ ಕಣ್ಣೊರೆಸುವ ತಂತ್ರ ಎಂದು ಟೀಕಿಸಿದರು. ನಿಷ್ಪಕ್ಷಪಾತ ತನಿಖೆ ಬೇಕಾದರೆ ಸಿಬಿಐಗೆ ಪ್ರಕರಣ ಹಸ್ತಾಂತರಿಸಬೇಕು. ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಜನರ ವಿಶ್ವಾಸ ಕುಗ್ಗಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಯೇ ಸತ್ಯವನ್ನು ಹೊರತರುತ್ತದೆ ಎಂದು ಹೇಳಿದರು.

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವ ಬದಲು ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ವರದಿ ಕೈಗೆ ಸಿಕ್ಕ ತಕ್ಷಣ ಕೆಎಸ್‌ಸಿಎ ಕಚೇರಿ ಎದುರು ಪ್ರತಿಭಟನೆ ನಡೆಸಿ ಕ್ಲೀನ್‌ಚಿಟ್ ವರದಿಯನ್ನು ಸಾರ್ವಜನಿಕವಾಗಿ ಸುಟ್ಟು ಹಾಕುತ್ತೇನೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.ಮೃತರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿಯೂ ಸರ್ಕಾರ ತಾರತಮ್ಯ ಮಾಡಿದೆ ಎಂದು ಆರೋಪಿಸಿದ ಅವರು, ಈ ವಿಷಯವನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಾಗುವುದು ಎಂದರು.

ಇದೇ ವೇಳೆ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಹಾಗೂ ಕೆಪಿಎಸ್‌ಸಿ ಹಗರಣ ಎರಡರಲ್ಲೂ ಸರ್ಕಾರದ ಪಾತ್ರದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಸತ್ಯ ಹೊರಬರಲು ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ಅಗತ್ಯ ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ

By Ravikumar - 28-07-2026


Ads in Post