ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಲ್ಲಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನ ಒಂದು ದಂಡೇ ಬಿಜೆಪಿಗೆ ಸೇರ್ಪಡೆಯಾಗಲಿದೆ ಎಂದು ಅವರು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ. ಕಾಂಗ್ರೆಸ್‌ನ ಒಂದು ದಂಡೇ ಬಿಜೆಪಿ ಸೇರಲಿದೆ’ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿರುವ ಹಲವು ಕಾಂಗ್ರೆಸ್ ಶಾಸಕರು ಈಗಾಗಲೇ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು ಎಂಬ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ನಿರಾಣಿ ಅವರ ಹೇಳಿಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಾಗುವ ನಾಯಕರು ಅಸಮಾಧಾನಗೊಂಡು ಪಕ್ಷ ತೊರೆಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಇದೇ ಹಿನ್ನೆಲೆಯಲ್ಲಿ ನಿರಾಣಿ ಅವರ ಹೇಳಿಕೆ ಕಾಂಗ್ರೆಸ್‌ಗೆ ರಾಜಕೀಯವಾಗಿ ಸವಾಲು ಎದುರಾಗುವ ಸೂಚನೆಯೇ ಎಂಬ ಪ್ರಶ್ನೆ ಮೂಡಿದೆ.
ಆದರೆ, ಕಾಂಗ್ರೆಸ್‌ನ ಯಾವ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬುದನ್ನು ನಿರಾಣಿ ಬಹಿರಂಗಪಡಿಸಿಲ್ಲ. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದೂ ಕುತೂಹಲ ಮೂಡಿಸಿದೆ. ಸದ್ಯ ರಾಜ್ಯ ರಾಜಕಾರಣದ ಗಮನ ಸಂಪುಟ ವಿಸ್ತರಣೆಯತ್ತ ನೆಟ್ಟಿದೆ. ಸಂಪುಟ ವಿಸ್ತರಣೆ ಬಳಿಕ ನಿಜಕ್ಕೂ ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬದಲಾವಣೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ.