Search


ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶ: ಯದುವೀರ್ ಒಡೆಯರ್

ಮೈಸೂರು: ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ಸಾರ್ವಜನಿಕರು ತಮ್ಮ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಂವಿಧಾನ ಅವಕಾಶ ನೀಡಿದ್ದು, ಯಾರ ಧಾರ್ಮಿಕ ಆಚರಣೆಯನ್ನೂ ತಡೆಯಲು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆ ಮಾಡುವುದಾದರೆ ಯಾರಿಗೂ ಹಾನಿ ಅಥವಾ ತೊಂದರೆಯಾಗದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಈ ಕುರಿತು ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಚಾಮುಂಡಿ ಬೆಟ್ಟವು ತಾಯಿ ಚಾಮುಂಡೇಶ್ವರಿ ನೆಲೆಸಿರುವ ಕ್ಷೇತ್ರವಾಗಿದ್ದು, ಅಲ್ಲಿ ಇಂತಹ ಕಾರ್ಯಕ್ರಮ ಏಕೆ ನಡೆಸಬೇಕು ಎಂದು ಪ್ರಶ್ನಿಸಿದರು.

ಧರ್ಮದ ಪದ್ಧತಿ, ನಂಬಿಕೆ ಹಾಗೂ ಪರಂಪರೆಯನ್ನು ಗೌರವಿಸಬೇಕು. ಯಾವುದೇ ಆಚರಣೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದು. ಜನಪ್ರತಿನಿಧಿಗಳಾಗಿ ಚಾಮುಂಡಿ ಬೆಟ್ಟದ ಪರಂಪರೆ ಮತ್ತು ನಂಬಿಕೆಗಳ ಕುರಿತು ಅಧಿಕಾರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಯದುವೀರ್ ಒಡೆಯರ್ ಹೇಳಿದರು.

By thebigbulletin.com - 01-10-2026


Ads in Post