ಅಮರಾವತಿ: ಕಾಣೆಯಾಗಿದ್ದ ಕೋವಿಡ್ ಸೋಂಕು ಮತ್ತೆ ಆಂಧ್ರಪ್ರದೇಶದ ಕಡಪದಲ್ಲಿ ಪತ್ತೆಯಾಗಿದೆ. ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟ ಬಳಿಕ ವೆಲ್ಲೂರಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಯಿಂದ ಕಡಪ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ
ಹೊಸ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ವಿಶೇಷ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಿದೆ. ಸೋಂಕು ಕಂಡುಬAದ ಪ್ರದೇಶಗಳಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಇದುವರೆಗೆ 18 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಉಳಿದ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಪತ್ತೆಯಾಗಿರುವ ವೈರಸ್ ರೂಪಾಂತರವನ್ನು ಪತ್ತೆಹಚ್ಚಲು ಮಾದರಿಗಳನ್ನು ಪುಣೆಯ ಪ್ರಯೋಗಾಲಯಕ್ಕೆ ಜೀನೋಮ್ ಸೀಕ್ವೆನ್ಸಿಂಗ್ಗಾಗಿ ಕಳುಹಿಸಲಾಗಿದೆ.
ಆಂಧ್ರಪ್ರದೇಶ ಜಿಲ್ಲಾ ಉಸ್ತುವಾರಿ ಸಚಿವೆ ಸವಿತಾ, ಸೋಂಕು ಮತ್ತಷ್ಟು ಹರಡದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸೋಂಕು ಕಂಡುಬಂದ ಪ್ರದೇಶಗಳಲ್ಲಿ ನಿಗಾ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ.
ಆಸ್ಪತ್ರೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇರುವವರನ್ನು ತಕ್ಷಣ ಪರೀಕ್ಷೆಗೆ ಒಳಪಡಿಸಿ, ಅಗತ್ಯವಿದ್ದರೆ ಐಸೋಲೇಷನ್ಗೆ ಸ್ಥಳಾಂತರಿಸುವAತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಕೋವಿಡ್ ಸನ್ನದ್ಧತೆ ಕುರಿತು ಎಚ್ಚರಿಕೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್, ಹಾಸಿಗೆಗಳು ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧವಾಗಿಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ