Search


ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ;ಮಹಿಷಾಸುರ ಪ್ರತಿಮೆ ಸುತ್ತ ನಿಷೇಧಾಜ್ಞೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಈ ನಡುವೆ, ಮಹಿಷಾಸುರ ಪ್ರತಿಮೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬೆಟ್ಟದ ಮೇಲೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಮೆಯ ಸುತ್ತಲೂ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಮಹಿಷ ದಸರಾ ಆಚರಣೆಗೆ ಮೈಸೂರಿನ ಟೌನ್ ಹಾಲ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ನಾಳೆ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ

ನಾಳೆ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ದೇವಾಲಯದ ಆವರಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿದೆ. ದಸರಾ ಉದ್ಘಾಟಕರು, ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಈ ಬಾರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ವಿವಿಧ ಧರ್ಮಗಳ ಧರ್ಮಗುರುಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಣ್ಯರು, ಧರ್ಮಗುರುಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮ ಯಾವುದೇ ಅಡಚಣೆಯಿಲ್ಲದೆ ಸುಗಮವಾಗಿ ನಡೆಯುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

By Ravikumar - 10-10-2026


Ads in Post