ರಾಜ್ಯದಲ್ಲಿ ನೀರಿನ ಕೊರತೆ ಮತ್ತು ರೈತರ ಆತಂಕದ ನಡುವೆಯೇ ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ಕಾವೇರಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.ಈ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಸೀಮಿತವಾಗಿರುವಾಗ ನೀರು ಬಿಡುವುದು ರೈತರ ಹಿತಾಸಕ್ತಿಗೆ ವಿರುದ್ಧ ಎಂದು ಅವರು ವಾದಿಸಿದ್ದಾರೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ವಪಕ್ಷ ಸಭೆ ಕರೆದಿದ್ದು, ಮುಂದಿನ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಗತ್ಯವಿದ್ದರೆ ಕೇಂದ್ರ ಹಾಗೂ ನ್ಯಾಯಾಂಗದ ಮಟ್ಟದಲ್ಲೂ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕಾವೇರಿ ನೀರಿನ ವಿಚಾರವು ಮತ್ತೊಮ್ಮೆ ರಾಜಕೀಯ ಮತ್ತು ರೈತರ ಹೋರಾಟಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಮಂಡ್ಯ ಸೇರಿದಂತೆ ಹಲವೆಡೆ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದೂ. ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಟ್ಟಾರೆಯಾಗಿ ಕಾವೇರಿ ಕಿಚ್ಚು ಮತ್ತೊಮ್ಮೆ ಕರುನಾಡನ್ನ ಸುಡಲು ಸಿದ್ದವಾಗಿದೆ.