ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಅಧಿಕೃತ ಚಾಲನೆ ದೊರೆತಿದೆ. ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನದ ಸಮೀಪ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಭ ಧನುರ್ ಲಗ್ನದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು, ಮೆಟ್ಟಿಲುಗಳಲ್ಲಿ ನಮಸ್ಕಾರ ಸಲ್ಲಿಸಿದರು. ಬಳಿಕ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ಮೂಲ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ನಂತರ ವೇದಿಕೆಯಲ್ಲಿ ಬೆಳ್ಳಿ ರಥದ ಮೇಲಿರಿಸಲಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಅಲ್ಲದೆ, ನೂರಾರು ಮಠಾಧೀಶರು ಹಾಗೂ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಸರಾ ಉದ್ಘಾಟನೆಯ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಪಾಸ್ ಹೊಂದಿರುವವರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.