Search


ಜಂತರ್‌ ಮಂತರ್‌ನಲ್ಲಿ ಅವಹೇಳನಕಾರಿ ಹೇಳಿಕೆ: ಯುವಕರನ್ನು ಕ್ಷಮಿಸಿದ ಮೋದಿ, ‘ಅವರು ನಮ್ಮ ಮಕ್ಕಳಿದ್ದಂತೆ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ವಿರುದ್ಧ ಹಾಗೂ ತಮ್ಮ ದಿವಂಗತ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ನೀಡಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮೋದಿ, ಯುವಕರು ಆಕ್ರೋಶದ ಸಂದರ್ಭದಲ್ಲಿ ತಪ್ಪು ದಾರಿ ಹಿಡಿದಿರಬಹುದು. ಅವರನ್ನು ಶಿಕ್ಷಿಸುವುದಕ್ಕಿಂತ ಸರಿಯಾದ ಮಾರ್ಗದರ್ಶನ ನೀಡುವುದು ಮುಖ್ಯ ಎಂದು ಹೇಳಿದ್ದಾರೆ.

“ಅವರು ನಮ್ಮ ಮಕ್ಕಳಿದ್ದಂತೆ. ದಾರಿ ತಪ್ಪಿದಾಗ ಅವರನ್ನು ಸರಿಯಾದ ದಾರಿಗೆ ತರುವುದು ನಮ್ಮ ಜವಾಬ್ದಾರಿ” ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳನ್ನು ಖಂಡಿಸಿ ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಲವರು ಪ್ರಧಾನಿ ಮೋದಿ ಹಾಗೂ ಅವರ ತಾಯಿಯ ಬಗ್ಗೆ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಯುವತಿಯೊಬ್ಬರು ಬಳಿಕ ಕ್ಷಮೆಯಾಚಿಸಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಪ್ರತಿಕ್ರಿಯೆ ನೀಡಿದ್ದು, ನಿಂದನೆ ಅಥವಾ ಅವಹೇಳನದಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ; ಯುವಕರಿಗೆ ತಿಳುವಳಿಕೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವುದು ಅಗತ್ಯ ಎಂದು ಹೇಳಿದ್ದಾರೆ. ಮೋದಿ ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

By Ravikumar - 01-08-2026


Ads in Post