Search


ಧರ್ಮಸ್ಥಳ ಸೌಜನ್ಯಾ ಪ್ರಕರಣ: 3 ತಿಂಗಳಲ್ಲಿ ಮರುತನಿಖೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ಮರುತನಿಖೆ ನಡೆಸುವಂತೆ ಸೂಚಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಗಡುವು ವಿಧಿಸಿದೆ.

ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಮರುತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ವೇಳೆ ಸಿಬಿಐ ನಡೆಸಿದ ತನಿಖೆಯ ಕುರಿತು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಜುಲೈನಲ್ಲಿ ನಡೆದ ವಿಚಾರಣೆಯಲ್ಲಿ ತನಿಖೆ ಕಳಪೆಯಾಗಿದ್ದು, ಸ್ವತಂತ್ರವಾಗಿ ತನಿಖೆ ನಡೆಸುವ ಬದಲು ಈ ಹಿಂದಿನ ತನಿಖೆಯಲ್ಲಿನ ಸಾಕ್ಷ್ಯಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರಿದ್ದ ಪೀಠ, ಸಿಬಿಐ ತನಿಖಾಧಿಕಾರಿ ನ್ಯಾಯಾಧೀಶರ ರೀತಿಯಲ್ಲಿ ಕಾರ್ಯನಿರ್ವಹಿಸಿರುವುದಾಗಿ ಅಭಿಪ್ರಾಯಪಟ್ಟಿತ್ತು. ಹಿಂದಿನ ತನಿಖೆಯಲ್ಲಿ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳನ್ನು ಪರಿಶೀಲಿಸಿ ವರದಿ ನೀಡಲಾಗಿದೆಯೇ ಹೊರತು, ಸ್ವತಂತ್ರ ತನಿಖೆ ನಡೆಸಲಾಗಿಲ್ಲ ಎಂದು ಕೋರ್ಟ್ ಗಮನಿಸಿತ್ತು.

ಇಂತಹ ತನಿಖೆ ಸಿಬಿಐನ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ಮರುತನಿಖೆಗೆ ಆದೇಶಿಸಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.

By Ravikumar - 21-09-2026


Ads in Post