Search


ಮಹಿಳಾ ಪೊಲೀಸ್ ಸಿಬ್ಬಂಡಿ ಮೇಲೆ ಹಲ್ಲೆ ಮಾಡಿದ್ರಾ ರಾಹುಲ್ ಗಾಂಧಿ; ಬಿಜೆಪಿಯಿಂದ ಟೀಕೆ

ನವದೆಹಲಿ: ದೆಹಲಿಯಲ್ಲಿ ಬುಧವಾರ ನಡೆದ ಇಂಡಿಯಾ ಮೈತ್ರಿಕೂಟದ ಸಿಇಸಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನು ತಳ್ಳಲು ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮತ್ತೊಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಪ್ರಿಯಾಂಕಾ ಗಾಂಧಿ ಮೊಣಕೈಯಿಂದ ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಸಾಮಾಜಿಕ ಮಾಧ್ಯಮ ಸಹ ಸಂಚಾಲಕ ಅರುಣ್ ಯಾದವ್ ಕೂಡ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇತರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಹೆಸರನ್ನೂ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ ಮುಂದುವರಿದಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷದ ಸಂಸದರು ಜಂತರ್ ಮಂತರ್ ಸಮೀಪ ಪ್ರತಿಭಟನೆ ನಡೆಸಿದರು. ಸಿಇಸಿ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಸಂಸದರು ಸೇರಿದಂತೆ ಒಟ್ಟು 91 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ತಿಳಿದುಬಂದಿದೆ.

By Ravikumar - 08-10-2026


Ads in Post