ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ, ಪ್ರತಿಭಟನೆಗಳಲ್ಲಿ ಭಾಗವಹಿಸುವ ಮುನ್ನ ದೇಶದ ಮುಸ್ಲಿಮರು ವಿವೇಚನೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಸಲಹೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಇರುವ ಪರಿಸ್ಥಿತಿಯನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಕೆಲವು ಶಕ್ತಿಗಳು ದೇಶದ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡಲು ಪ್ರಯತ್ನಿಸುತ್ತಿವೆ. ಜನರನ್ನು ದಾರಿ ತಪ್ಪಿಸಿ ದೇಶದ ವಾತಾವರಣವನ್ನು ಹಾಳುಮಾಡುವ ಪಿತೂರಿಗಳು ನಡೆಯುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 10ರಂದು ನಡೆಯಲಿರುವ ಪ್ರತಿಭಟನೆಗೆ ಕೆಲವು ರಾಜಕೀಯ ಪಕ್ಷಗಳು ಕರೆ ನೀಡಿರುವುದನ್ನು ಉಲ್ಲೇಖಿಸಿದ ಇಲ್ಯಾಸಿ, ಈ ಪ್ರತಿಭಟನೆಗಳು ಸರ್ಕಾರದ ವಿರುದ್ಧ ನಡೆಯುತ್ತಿವೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಮುಸ್ಲಿಮರು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಸಾಧನಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಈವರೆಗೆ ಸಮುದಾಯವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ ಎಂಬ ಭಾವನೆ ವ್ಯಕ್ತಪಡಿಸಿದ ಅವರು, ಇಂತಹ ಸಂದರ್ಭಗಳಲ್ಲಿ ಭಾವನೆಗಳಿಗೆ ಒಳಗಾಗದೆ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.