Search


ಸತೀಶ್‌ ಜಾರಕಿಹೊಳಿ ಕುಟುಂಬದ ಮೇಲೆ ED ದಾಳಿ; ಅಕ್ರಮ ಹಣ ವರ್ಗಾವಣೆ ಶಂಕೆ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರ ಕುಟುಂಬ ಸದಸ್ಯರ ಮೇಲೆ ಇಡಿ ದಾಳಿಯಾಗಿದೆ. ಸುಮಾರು 6 ಸ್ಥಳಗಳಲ್ಲಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸತೀಶ್‌ ಜಾರಕಿಹೊಳಿ ಅವರ ಸಹೋದರಿ ಪತಿ ಮಂಜುನಾಥ್‌ ಅವರಿಗೆ ಸೇರಿದ  6 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ., ಅಬಕಾರಿ ಇಲಾಖೆಯ(Excise Department)ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ (Y. Manjunath) ಅವರಿಗೆ ಸೇರಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದೆ. ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ವೈ. ಮಂಜುನಾಥ್ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಜಂಟಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯನ್ನು ಕೈಗೊಂಡಿದೆ. 

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ತನಿಖೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ 10 ಕ್ಕೂ ಹೆಚ್ಚು ಅರೆಸೇನಾ ಪಡೆಯ (Paramilitary Force) ಯೋಧರ ಕಾವಲಿನಲ್ಲಿ ಈ ದಾಳಿ ನಡೆಸಲಾಗಿದೆ. ವೈ. ಮಂಜುನಾಥ್ ಅವರು ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಬೆಳಗಾವಿ ವಲಯದ ಪ್ರಮುಖ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಜುನಾಥ್ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳು, ಆಸ್ತಿ ಪಾಸ್ತಿ ವಿವರ ಹಾಗೂ ಬ್ಯಾಂಕ್ ಖಾತೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಅಥವಾ ಅಕ್ರಮ ಹಣ ವರ್ಗಾವಣೆ (Money Laundering) ಶಂಕೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ತನಿಖೆಯ ಬಳಿಕವಷ್ಟೇ ಹೆಚ್ಚಿನ ವಿವರಗಳು ಹೊರಬರಬೇಕಿದೆ.

By Ravikumar - 24-06-2026


Ads in Post