ನವದೆಹಲಿ: ಸ್ವಾತಂತ್ರ್ಯ ದಿನದಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಹಾಡುವುದನ್ನು ನಿಲ್ಲಿಸುವಂತೆ ಸನ್ನೆ ಮಾಡಿದ್ದರು ಎಂಬ ಆರೋಪಕ್ಕೆ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ʻನಮ್ಮನ್ನ ಜೈಲಿಗೆ ಹಾಕಿದರೂ ಅಥವಾ ನೇಣಿಗೆ ಹಾಕಿದರೂ ನಾವು ವಂದೇ ಮಾತರಂನ ಎರಡು ಪ್ಯಾರಾಗಳನ್ನ ಮಾತ್ರ ಹಾಡುತ್ತೇವೆʼ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ (Vande Mataram Row) ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (B.K.Hariprasad) ಸ್ಪಷ್ಟಪಡಿಸಿದ್ದಾರೆ. ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ಎರಡು ಪ್ಯಾರಾ ಎಂದಿದ್ದಾರೆ.
ಮುಂದುವರಿದು ಮಾತನಾಡಿರುವ ಹರಿಪ್ರಸಾದ್ ʻಬಿಜೆಪಿ ಸರ್ಕಾರ ವಂದೇ ಮಾತರಂ ಕಡ್ಡಾಯಗೊಳಿಸುವ ಮೂಲಕ ರಾಷ್ಟ್ರಗೀತೆ ʻಜನಗಣಮನʼವನ್ನ ಎರಡನೇ ದರ್ಜೆಗೆ ತರುವ ಪ್ರಯತ್ನ ಮಾಡುತ್ತಿದೆ, ಈ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜ ಮತ್ತು ಚಿನ್ಹೆಗಳಿಗೆ ಬಿಜೆಪಿ ಮತ್ತು ಆರ್ಎಸ್ಎಸ್ ಅಪಮಾನ ಮಾಡಿದೆ ಎಂದು ಹೇಳಿದರು. ʻನಾವು ವಂದೇ ಮಾತರಂ ವಿರುದ್ಧ ಇಲ್ಲ. ಆದರೆ, ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನು ಮಾತ್ರ ಹಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಸರ್ಕಾರ ಜನರಿಂದ ಆಯ್ಕೆಯಾಗಿದೆ. ಕಾನೂನು ಪಾಲನೆ ಮಾಡಲಿ, ನಮ್ಮ ಆಕ್ಷೇಪವಿಲ್ಲ ಎಂದರು.
ಆರ್ಎಸ್ಎಸ್ ಹಾಗೂ ಹಿಂದೂ ಮಹಾಸಭಾದ ಚಟುವಟಿಕೆಗಳನ್ನು ಪ್ರಸ್ತಾಪಿಸಿದ ಹರಿಪ್ರಸಾದ್, ‘ಸದಾ ವತ್ಸಲೇ’ಯನ್ನು ರಾಷ್ಟ್ರಗೀತೆ ಎಂದು ಪರಿಗಣಿಸಬಹುದೇ ಎಂದು ಪ್ರಶ್ನಿಸಿದರು. ‘ಆಜಾದ್ ಹಿಂದ್ ಜಿಂದಾಬಾದ್, ಇಂಕಲಾಬ್ ಜಿಂದಾಬಾದ್ ಘೋಷಣೆಗಳನ್ನು ಬಿಜೆಪಿಯವರು ಕೂಗುತ್ತಾರೆಯೇ’ ಎಂದು ಪ್ರಶ್ನಿಸಿದ ಅವರು, ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.