ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಜುಲೈ 20ರಂದು ಹೊಳೆನರಸೀಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಹೊಳೆನರಸೀಪುರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಅಂತ್ಯಕ್ರಿಯೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ರಾಜಕೀಯ ನಾಯಕರು, ಗಣ್ಯರು, ಸಾರ್ವಜನಿಕರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಇದರಿಂದ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಇದೇ ವೇಳೆ, ಚೆನ್ನಮ್ಮ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಜುಲೈ 20ರಂದು ಹೊಳೆನರಸೀಪುರ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಪರಿಣಾಮವಾಗಿ ಪಟ್ಟಣ ಬಹುತೇಕ ಸ್ತಬ್ಧವಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಜುಲೈ 19 ಹಾಗೂ 20ರಂದು ಹಾಸನ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಅಂತ್ಯಕ್ರಿಯೆ ಸುಗಮವಾಗಿ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ನಾಳೆ ಮಧ್ಯಾಹ್ನ 2 ರಿಂದ ಸಂಜೆ 4:15ರವರೆಗೆ ವಾಸ್ತು ಪ್ರಕಾರವೇ ಅಂತ್ಯಕ್ರಿಯೆ ನಡೆಯಲಿದೆ. ಪುರೋಹಿತರಾದ ಕಣ್ಣನ್ ಶರ್ಮಾ, ಮಹೇಶ್ ಶರ್ಮಾ, ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.