ಮೈಸೂರು: ಟಿ.ನರಸೀಪುರದಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಸೆಪ್ಟೆಂಬರ್ 18ರಂದು ಗಣೇಶ ವಿಸರ್ಜನೆ ಅಂಗವಾಗಿ ನಡೆದ ಶೋಭಾಯಾತ್ರೆಯ ಸಂದರ್ಭದಲ್ಲಿ ಟಿ.ನರಸೀಪುರದ ಲಿಂಕ್ ರಸ್ತೆಯಲ್ಲಿರುವ ಮಸೀದಿ ಮುಂಭಾಗ ಪ್ರತಾಪ್ ಸಿಂಹ ಭಾಷಣ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ಅವರು ಪೊಲೀಸ್ ಅಧಿಕಾರಿಗಳಿಗೆ ಸವಾಲು ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 132, 191, 194, 196(1)(a)(b), 299 ಹಾಗೂ 353(1)(b)(c) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕ ಸೇವಕರು ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ವಿವಿಧ ಗುಂಪುಗಳು ಮತ್ತು ಸಮುದಾಯಗಳ ನಡುವೆ ದ್ವೇಷಕ್ಕೆ ಉತ್ತೇಜನ ನೀಡುವುದು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡುವುದು ಹಾಗೂ ಪ್ರಚೋದನಕಾರಿ ಭಾಷಣದ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದ ಕಾಂಗ್ರೆಸ್ ನಿಯೋಗ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿತ್ತು. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.