ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆಸಿದ ಲಾಠಿ ಚಾರ್ಜ್ ಆರೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದೆ. ಪೊಲೀಸರು ಮತ್ತು ಅರಸೇನಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿವೆ ಎಂಬ ಆರೋಪದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಐವರು ಸದಸ್ಯರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನ ಸುಪ್ರೀಂ ಕೋರ್ಟ್ ರಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ(R Subhash Reddy) ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ. ಇವರ ಜೊತೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ, ದೆಹಲಿ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಶಾಲಿಂದರ್ ಕೌರ್, ಮಾಜಿ ಸಿಬಿಐ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಹಾಗೂ ಮೇಘಾಲಯದ ನಿವೃತ್ತ ಡಿಜಿಪಿ ಎಲ್.ಆರ್. ಬಿಷ್ಣೋಯ್ ಅವರು ಈ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಜೆನ್-ಜೀ ಪ್ರತಿಭಟನೆ ವೇಳೆ ಅಹಿತಕರ ಘಟನೆ..?
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆದಿದೆ ಎನ್ನಲಾದ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಗೆ ಸಮಿತಿ ಮೊದಲ ಆದ್ಯತೆ ನೀಡಬೇಕು ಮತ್ತು ತೀವ್ರ ಗಾಯಗೊಂಡವರ ಕುರಿತು ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಪ್ರತಿಭಟನಾ ಸ್ಥಳದಲ್ಲಿನ ಸಿಸಿಟಿವಿ ದೃಷ್ಯಾವಳಿಗಳು, ಡ್ರೋನ್ ವಿಡಿಯೋ ಸೇರಿದಂತೆ ಎಲ್ಲಾ ಅಮೂಲ್ಯ ಸಾಕ್ಷಿಗಳನ್ನ ರಕ್ಷಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಈಗಾಗಲೇ ಪೊಲೀಸರ ವಶದಲ್ಲಿರುವ ಅಪ್ರಾಪ್ತರನ್ನ ಬಿಡುಗಡೆ ಮಾಡುವಂತೆ ಸೂಚಿಸಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಂಘಟನೆಗಳು ಸಂಸತ್ ಚಲೋ ಕರೆ ನೀಡಿದ್ದವು. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿ ಹಲವರನ್ನು ಬಂಧಿಸಿದ್ದರು.