ನೀಟ್-ಯುಜಿ 2026 ಪರೀಕ್ಷೆಯಲ್ಲಿ ನಡೆದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ದೇಶಾದ್ಯಂತ ಭುಗಿಲೆದ್ದ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಪರೀಕ್ಷೆಗಳ ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಘೋಷಿಸಲಾಗಿದೆ. ಈ ಕುರಿತು ಸ್ವತಃ ನರೇಂದ್ರ ಮೋದಿಯೇ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದು. ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರುವುದಾಗಿ ಘೋಷಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಪತ್ತೆಹಚ್ಚಿ, ದೀರ್ಘಾವಧಿಯ ಸುಧಾರಣಾ ಯೋಜನೆ ರೂಪಿಸಲು ಉನ್ನತ ಮಟ್ಟದ ಕಾರ್ಯಪಡೆ (High-Powered Task Force) ರಚಿಸಲಾಗಿದೆ. ಈ ಸಮಿತಿ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ಸಂಪೂರ್ಣ ಪ್ರಕ್ರಿಯೆಯನ್ನು ಪರಿಶೀಲಿಸಿ, ಭವಿಷ್ಯದಲ್ಲಿ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಶಿಫಾರಸುಗಳನ್ನು ನೀಡಲಿದೆ.
ಕೇಂದ್ರ ಸರ್ಕಾರ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಅತ್ಯಾಧುನಿಕ ಡಿಜಿಟಲ್ ಭದ್ರತಾ ವ್ಯವಸ್ಥೆ, ಎನ್‌ಕ್ರಿಪ್ಟೆಡ್ ಪ್ರಶ್ನೆಪತ್ರಿಕೆ ವಿತರಣೆ, ಕೃತಕ ಬುದ್ಧಿಮತ್ತೆ (AI) ಆಧಾರಿತ ಮೇಲ್ವಿಚಾರಣೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ದೃಢೀಕರಣದಂತಹ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡಿದೆ.ಇದರ ಜೊತೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಾರ್ಯವೈಖರಿಯಲ್ಲೂ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಆಯ್ಕೆ, ಸಿಬ್ಬಂದಿ ನೇಮಕ, ಪ್ರಶ್ನೆಪತ್ರಿಕೆ ಸಾಗಣೆ ಮತ್ತು ಪರೀಕ್ಷೆಯ ನಂತರದ ಮೌಲ್ಯಮಾಪನ ಸೇರಿದಂತೆ ಪ್ರತಿಯೊಂದು ಹಂತಕ್ಕೂ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುತ್ತದೆ.
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವ ವ್ಯಕ್ತಿಗಳು ಹಾಗೂ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ತಪ್ಪಿತಸ್ಥರಿಗೆ ದೀರ್ಘಾವಧಿಯ ಜೈಲು ಶಿಕ್ಷೆ ಮತ್ತು ಭಾರೀ ದಂಡ ವಿಧಿಸುವ ಕಾನೂನು ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಉದ್ದೇಶವಿದೆ. ಈ ಕ್ರಮಗಳ ಮೂಲಕ ದೇಶದ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸುವುದು ಹಾಗೂ ಭವಿಷ್ಯದಲ್ಲಿ ಯಾವುದೇ ರಾಷ್ಟ್ರೀಯ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.