ಲಕ್ನೋ: ಉತ್ತರ ಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸೆಪ್ಟೆಂಬರ್ 25ರಿಂದ 27ರವರೆಗೆ 56 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಸಿತಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು 7 ಮಂದಿ ಮೃತಪಟ್ಟಿದ್ದಾರೆ. ಲಖಿಮ್ಪುರ ಖೇರಿ, ಬಹ್ರೈಚ್ ಹಾಗೂ ಬಲರಾಮ್ಪುರದಲ್ಲಿ ತಲಾ 5 ಮಂದಿ, ಅಯೋಧ್ಯೆ ಮತ್ತು ಗೋರಖ್ಪುರದಲ್ಲಿ ತಲಾ 4 ಮಂದಿ ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ. ರಾಜ್ಯದ 63 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, 1,021 ಮನೆಗಳಿಗೆ ಹಾನಿಯಾಗಿದೆ. ಈ ಅವಧಿಯಲ್ಲಿ 45.1 ಮಿಲಿಮೀಟರ್ ಮಳೆ ದಾಖಲಾಗಿದೆ.
ಮುಂದಿನ 24 ಗಂಟೆಗಳ ಬಳಿಕ ರಾಜ್ಯದ ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದ್ದರೂ, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಘಾಗ್ರಾ ಹಾಗೂ ರಾಪ್ತಿ ನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ.
ಇತ್ತ ಲಕ್ನೋದಲ್ಲೂ ಭಾರೀ ಮಳೆಯಿಂದ ಐತಿಹಾಸಿಕ ಗೇಟ್ನ ಒಂದು ಭಾಗ ಕುಸಿದುಬಿದ್ದಿದೆ. ಸಾಮಾನ್ಯವಾಗಿ ಈ ಪ್ರದೇಶದಲ್ಲಿ ವಾಹನಗಳು ಹಾಗೂ ಪಾದಚಾರಿಗಳ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಘಟನೆ ನಡೆದ ವೇಳೆ ಜನಸಂದಣಿ ಕಡಿಮೆ ಇದ್ದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಲವು ಪ್ರದೇಶಗಳಲ್ಲಿ ಮರಗಳು ವಾಹನಗಳ ಮೇಲೆ ಬಿದ್ದಿರುವ ಘಟನೆಗಳೂ ವರದಿಯಾಗಿವೆ.
ನೇಪಾಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪರಿಸ್ಥಿತಿಯ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಕ್ಷಣಾ ತಂಡಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಗತ್ಯವಿರುವವರಿಗೆ ತಕ್ಷಣದ ನೆರವು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ.