Search


ಹೈಕಮಾಂಡ್ ಮುಂದೆ ಮತ್ತೇರಡು ಡಿಸಿಎಂ ಸ್ಥಾನಕ್ಕೆ ಬೇಡಿಕೆ; ಜಾರಕಿಹೊಳಿಗೆ ಖುಲಾಯಿಸುತ್ತ ಲಕ್..!

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸಿದ್ಧತೆ ನಡೆಸುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ಪ್ರಸ್ತಾವನೆ ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿ ಈಗಿರುವ ಉಪಮುಖ್ಯಮಂತ್ರಿಯ ಹುದ್ದೆಯ ಜೊತೆಗೆ ಇನ್ನೂ ಮೂರು ಉಪಮುಖ್ಯಮಂತ್ರಿಗಳ ಹುದ್ದೆಗಳನ್ನು ಸೃಷ್ಟಿಸುವಂತೆ ಅವರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಹೈಕಮಾಂಡ್ ಇದಕ್ಕೆ ಒಪ್ಪಿಗೆ ಸೂಚಿಸಿದರೆ ಸತೀಶ್ ಜಾರಕಿಹೊಳಿ, ಎಂ.ಬಿ ಪಾಟೀಲ್ ಡಿಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಪ್ರಸ್ತಾವನೆಯ ಉದ್ದೇಶ ರಾಜ್ಯದ ವಿವಿಧ ಪ್ರಾದೇಶಿಕ, ಸಾಮಾಜಿಕ ಹಾಗೂ ರಾಜಕೀಯ ಸಮುದಾಯಗಳಿಗೆ ಸಮರ್ಪಕ ಪ್ರತಿನಿಧಿತ್ವ ನೀಡುವುದಾಗಿದೆ ಎಂದು ಮೂಲಗಳು ತಿಳಿಸಿವೆ. ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಯುವ ನಾಯಕರು, ಮಹಿಳೆಯರು ಹಾಗೂ ವಿವಿಧ ವರ್ಗಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಅಸಮಾಧಾನವನ್ನು ಕಡಿಮೆ ಮಾಡುವ ಪ್ರಯತ್ನವಾಗಬಹುದು ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಆದರೆ, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಉಪಮುಖ್ಯಮಂತ್ರಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ.

By Ravikumar - 22-07-2026


Ads in Post