ಪಾಟ್ನಾ: ಬಿಹಾರ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ರಾಷ್ಟ್ರೀಯ ಜನತಾ ದಳ (RJD) ನಾಯಕ ತೇಜಸ್ವಿ ಯಾದವ್, ಈ ಎರಡೂ ರಾಜ್ಯಗಳಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಬಳಿಕ ತೇಜಸ್ವಿ ಯಾದವ್ ಈ ಹೇಳಿಕೆ ನೀಡಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಾತ್ರದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದರು. ಕುಮಾರ್ ಅವರ ಕಾರಣದಿಂದಾಗಿ ಬಿಜೆಪಿ ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದರು.
ಚುನಾವಣಾ ಆಯೋಗದ ಕಾರ್ಯವೈಖರಿ ಇದೀಗ ಬಹಿರಂಗವಾಗಿದೆ ಎಂದ ಅವರು, ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ಸಂವಿಧಾನಾತ್ಮಕ ಸಂಸ್ಥೆಗಳು ಬಿಜೆಪಿಯ ಘಟಕಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದ ತೇಜಸ್ವಿ ಯಾದವ್, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಿದರು.
ಇದೇ ವೇಳೆ, ಕಳೆದ 10 ತಿಂಗಳಲ್ಲಿ SIRಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಚುನಾವಣಾ ಆಯುಕ್ತರಾದ ಸಂಧು ಮತ್ತು ಜೋಶಿ ಅವರು ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಆದರೆ, SIRಗೆ ಸಂಬಂಧಿಸಿದ ಎಲ್ಲ ನಿರ್ಧಾರಗಳನ್ನು ಮೂವರು ಚುನಾವಣಾ ಆಯುಕ್ತರ ಒಮ್ಮತದೊಂದಿಗೆ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.