Search


ಜೆಡಿಎಸ್‌ನಲ್ಲಿ ಜಾಹ್ನವಿಗೆ ಹೊಸ ಜವಾಬ್ದಾರಿ; ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ಬಿಗ್‌ಬಾಸ್ ಕನ್ನಡ ಮಾಜಿ ಸ್ಪರ್ಧಿ ಹಾಗೂ ಟಿವಿ ನಿರೂಪಕಿ ಜಾಹ್ನವಿ ಅವರಿಗೆ ಜೆಡಿಎಸ್‌ನಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

2024ರ ಮೇ ತಿಂಗಳಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು. ಇದೀಗ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ದೊರೆತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ತಿಳಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಗ್ರೇಟರ್ ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಟಿವಿ ಆಂಕರ್ ಆಗಿ ವೃತ್ತಿ ಆರಂಭಿಸಿದ್ದ ಜಾಹ್ನವಿ ಬಳಿಕ ವಿವಿಧ ಟಿವಿ ಕಾರ್ಯಕ್ರಮಗಳು, ರಿಯಾಲಿಟಿ ಶೋಗಳು ಹಾಗೂ ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದರು. 2024ರಲ್ಲಿ ಜೆಡಿಎಸ್ ಸೇರ್ಪಡೆಯಾದ ಬಳಿಕ ರಾಜಕೀಯ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಡದಿ ಟೌನ್‌ಶಿಪ್‌ ಯೋಜನೆ ಹಾಗೂ ಕೃಷಿ ಭೂಮಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳಲ್ಲಿ ಜಾಹ್ನವಿ ಕಾಣಿಸಿಕೊಂಡಿದ್ದಾರೆ. ರೈತರ ಪರವಾಗಿ ಧ್ವನಿ ಎತ್ತಿರುವ ಅವರು, ಬಿಡದಿ ಭಾಗದ ಭೂಸ್ವಾಧೀನ ವಿಚಾರವನ್ನು ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಸ್ತಾಪಿಸಿದ್ದಾರೆ. ಈ ವಿಚಾರದಲ್ಲಿ ಸರ್ಕಾರದ ಯೋಜನೆಗೆ ಸಂಬಂಧಿಸಿದಂತೆ ಅವರು ವ್ಯಕ್ತಪಡಿಸಿರುವ ಆಕ್ಷೇಪಣೆಗಳು ಮಾಧ್ಯಮಗಳಲ್ಲೂ ವರದಿಯಾಗಿವೆ.

ಜೆಡಿಎಸ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆ ದೊರೆತಿರುವುದು ಜಾಹ್ನವಿ ಅವರ ರಾಜಕೀಯ ಪಯಣದಲ್ಲಿ ಹೊಸ ಜವಾಬ್ದಾರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಾಜಕೀಯ ಚಟುವಟಿಕೆಗಳಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.

By Ravikumar - 02-10-2026


Ads in Post