ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಹಾಗೂ 2 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಪ್ಪಳ, ಗದಗ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’
ಉತ್ತರ ಒಳನಾಡಿನ ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 50-60 ಕಿ.ಮೀ ವೇಗ) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಮತ್ತು ರಾಯಚೂರಿನಲ್ಲೂ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.