Search


ಕೆಪಿಎಸ್‌ಸಿ ಪರೀಕ್ಷಾ ಅಕ್ರಮ: ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾದರೂ ರಕ್ಷಣೆ ಇಲ್ಲ ಎಂದ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೆಪಿಎಸ್‌ಸಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅಥವಾ ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷ್ಯವನ್ನು ದುರ್ಬಲಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ತಾವು ವಿರೋಧ ಪಕ್ಷದಲ್ಲಿದ್ದಾಗಲೇ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಖಾಸಗಿ ವಿಧೇಯಕ ಮಂಡಿಸಿದ್ದೆ. ಇದೀಗ ನಮ್ಮ ಸರ್ಕಾರದ ಅವಧಿಯಲ್ಲೇ ಪರೀಕ್ಷಾ ಅಕ್ರಮ ತಡೆಯಲು ವಿಧೇಯಕ ತರಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ರಾಜ್ಯದಲ್ಲಿ ಸುಮಾರು 70 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ. ಸುಮಾರು 35 ಲಕ್ಷ ಅಭ್ಯರ್ಥಿಗಳು ವಿವಿಧ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಇಷ್ಟೊಂದು ವಿದ್ಯಾರ್ಥಿಗಳ ಭವಿಷ್ಯ ಮತ್ತು ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಿಲ್ಲೆಯ ಕೇವಲ ಐದು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರವೇ ಬರ ಘೋಷಣೆ ಮಾಡಬೇಕಾಗುತ್ತದೆ ಎಂದರು. ಈ ನಿಯಮಾವಳಿಯನ್ನು ರಚಿಸಿರುವುದು ಕೇಂದ್ರ ಸರ್ಕಾರ. ವಿರೋಧ ಪಕ್ಷದವರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುವ ಬದಲು ಕೇಂದ್ರ ಸರ್ಕಾರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಅವರು ತಿರುಗೇಟು ನೀಡಿದರು.

ಕರ್ನಾಟಕದ ಕಾರಾಗೃಹಗಳ ಆಡಳಿತ, ಸುರಕ್ಷತೆ ಹಾಗೂ ಸುಧಾರಣೆಗಳಿಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಈಗಾಗಲೇ ತನ್ನ ವರದಿ ಸಲ್ಲಿಸಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ವರದಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅಗತ್ಯ ಶಿಫಾರಸುಗಳನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.

By Ravikumar - 05-09-2026


Ads in Post