ನವದೆಹಲಿ: ನೀಟ್-2026 ಪರೀಕ್ಷೆಯಲ್ಲಿ(NEET Exam) ಲೋಪಗಳು ಆಗಿದ್ದನ್ನು ಒಪ್ಪಿಕೊಂಡಿದ್ದೇವೆ. ಆದರೆ, ತಪ್ಪುಗಳನ್ನು ಸರಿಪಡಿಸಿ ಮರುಪರೀಕ್ಷೆಯನ್ನು(Re-Exam) ಯಶಸ್ವಿಯಾಗಿ ನಡೆಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನ ಸುರಕ್ಷಿತವಾಗಿಡಲು ಸರ್ಕಾರ ಬದ್ದವಾಗಿದ್ದು, ನಮ್ಮ ಮೇಲೆ ನಂಬಿಕೆ ಇಡಿ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಿಳಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಕಡೆಯಿಂದ ಕೆಲವು ಲೋಪಗಳು ಆಗಿದ್ದವು. ಅದನ್ನು ನಾವು ಒಪ್ಪಿಕೊಂಡಿದ್ದೇವೆ. ನಂತರ ಅಗತ್ಯ ಕ್ರಮ ಕೈಗೊಂಡು ವ್ಯವಸ್ಥೆಯನ್ನು ಸರಿಪಡಿಸಿದ್ದೇವೆ ಎಂದು ಹೇಳಿದ್ದಾರೆ. ಪರೀಕ್ಷೆ ರದ್ದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಧಕ್ಕೆಯಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದರು. ನೀಟ್ ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳು ಆತಂಕ ಪಡಬೇಕಿಲ್ಲ. ದೇಶದ ವ್ಯವಸ್ಥೆಯ ಮೇಲೆ ನಂಬಿಕೆ ಇಡಿ. ವಿದ್ಯಾರ್ಥಿಗಳ ಭವಿಷ್ಯ ಸುರಕ್ಷಿತವಾಗಿಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಲೀಕ್ ಮಾಡಿದವರ ವಿರುದ್ದ ಕಠಿಣ ಕ್ರಮ..!
ಪ್ರಶ್ನೆಪತ್ರಿಕೆ ಲೀಕ್ ಕುರಿತು ಮಾತನಾಡಿದ ಧರ್ಮೇಂದ್ರ ಪ್ರಧಾನ್ "ಪೇಪರ್ ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಪರೀಕ್ಷಾ ಭದ್ರತೆಗೆ ಭಾರತೀಯ ವಾಯುಪಡೆ ಹಾಗೂ ಸಿಎಪಿಎಫ್ ಪಡೆಗಳನ್ನು ಬಳಸಿರುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭಯ ಹುಟ್ಟಿಸುವ ರಾಜಕೀಯ ಮಾಡಬಾರದು. ಯುವಕರನ್ನು ದಾರಿ ತಪ್ಪಿಸಬಾರದು ಎಂದು ಹೇಳಿದ್ದಾರೆ.