ಬೆಂಗಳೂರು: ಮಗಳಾದ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ಕಲ್ಪಿಸಲು ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಕೇವಲ ವದಂತಿ ಎಂದು ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಚಿವರ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾಗಿರುವ ಮುನಿಯಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುನಿಯಪ್ಪ ಅವರು ಪ್ರಸ್ತುತ ನಿರ್ವಹಿಸುತ್ತಿರುವ ಆಹಾರ ಇಲಾಖೆಯ ಬದಲಾಗಿ ಸಮಾಜ ಕಲ್ಯಾಣ ಇಲಾಖೆ ನೀಡುವಂತೆ ಕಾಂಗ್ರೆಸ್ ನಾಯಕತ್ವದ ಮುಂದೆ ಮನವಿ ಮಾಡಿದ್ದಾರೆ. ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡಲು ಈ ಖಾತೆ ಬೇಕು ಎಂಬುದು ಅವರ ನಿಲುವಾಗಿದೆ. ಈ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಚಿವರ ಕಚೇರಿ ಹೇಳಿದೆ. ಸಮಾಜ ಕಲ್ಯಾಣ ಖಾತೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಲಾಗಿದೆ.
ಮುನಿಯಪ್ಪ ಅವರು ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿದ್ದಲ್ಲದೆ, ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿದ್ದರು. ಇದೀಗ ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆಯ ಬೇಡಿಕೆ ಮುಂದಿಟ್ಟಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹೀಗಾಗಿ “ಮಗಳಿಗಾಗಿ ಸಚಿವ ಸ್ಥಾನ ತ್ಯಾಗ” ಎಂಬ ಸುದ್ದಿಗೆ ತೆರೆ ಎಳೆದಿರುವ ಕೆ.ಎಚ್. ಮುನಿಯಪ್ಪ, ತಮ್ಮ ಬೇಡಿಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲ, ಖಾತೆ ಬದಲಾವಣೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.