ನವದೆಹಲಿ: ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು. "ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದೆಲ್ಲಡೆ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆ ಪ್ರಧಾನಿ ಅವರ ಈ ಸಂದೇಶ ಮಹತ್ವ ಪಡೆದುಕೊಂಡಿದ್ದು. ಇನ್ನಾದರೂ ಪ್ರತಿಭಟನೆಗಳು ತಣ್ಣಗಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
'ಯುವಕರ ಭವಿಷ್ಯವೇ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದ್ದು, ಅವರ ಪರಿಶ್ರಮದೊಂದಿಗೆ ಆಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವ ಆರೋಪಿಗಳಿಗೆ ಶೀಘ್ರ ಹಾಗೂ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆ ಈ ಘೋಷಣೆ ಮಹತ್ವ ಪಡೆದಿದೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸವನ್ನು ಉಳಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಪಾರದರ್ಶಕ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು.