Search


‘ಮುಂದಿನ ಬಾರಿ ಟಿಕೆಟ್ ಕೊಡಬೇಡಿ’; ಪ್ರದೀಪ್ ಈಶ್ವರ್ ವಿರುದ್ಧ ಕಾಂಗ್ರೆಸ್ ಮುಖಂಡರ ದೂರು

ಚಿಕ್ಕಬಳ್ಳಾಪುರ: 25 ವರ್ಷಗಳ ಬಳಿಕ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕಾಂಗ್ರೆಸ್‌ನಲ್ಲೇ ಇದೀಗ ಅಸಮಾಧಾನ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದೆ. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಕ್ಷೇತ್ರದಲ್ಲಿನ ಸ್ಥಳೀಯ ರಾಜಕೀಯ ಬೆಳವಣಿಗೆಗಳ ಕುರಿತು ಹಲವು ಅಹವಾಲುಗಳನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರದೀಪ್ ಈಶ್ವರ್ ಅವರು ಕ್ಷೇತ್ರಕ್ಕೆ ಸಮರ್ಪಕವಾಗಿ ಭೇಟಿ ನೀಡುತ್ತಿಲ್ಲ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಕರೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳನ್ನು ನಿಯೋಗದ ಸದಸ್ಯರು ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಅವರು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.

ಇದರ ಜೊತೆಗೆ, ಪಕ್ಷಕ್ಕಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಾಮನಿರ್ದೇಶನ ಸ್ಥಾನಗಳನ್ನು ಕಲ್ಪಿಸುವಲ್ಲಿ ಶಾಸಕರು ಆಸಕ್ತಿ ತೋರಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಶಾಸಕರು ಸಕ್ರಿಯವಾಗಿ ತೊಡಗಿಸಿಕೊಳ್ಳದ ಪರಿಣಾಮ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕರ ಕಾರ್ಯವೈಖರಿ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದ ಈ ಎಲ್ಲ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿರುವ ಮುಖಂಡರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ದೂರು ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿನ ಆಂತರಿಕ ಅಸಮಾಧಾನದ ಬಗ್ಗೆ ಚರ್ಚೆಗೆ ಕಾರಣವಾಗಿದೆ.

By Ravikumar - 30-09-2026


Ads in Post