Search


ವಿಜಯೇಂದ್ರ ಜೊತೆ ಯಾವುದೇ ಹೊಂದಾಣಿಕೆ ಇಲ್ಲ; ಯತ್ನಾಳ್ ಸ್ಪಷ್ಟನೆ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಯಾವುದೇ ರಾಜಕೀಯ ಹೊಂದಾಣಿಕೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ಬಳಿಕವಷ್ಟೇ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡುವುದಾಗಿ ಅವರು ಹೇಳಿದ್ದಾರೆ. ವಿಜಯೇಂದ್ರ ಹಾಗೂ ಯತ್ನಾಳ್ ಮುಖಾಮುಖಿ ಭೇಟಿಯಾಗಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ. ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ, ನಾರಾಯಣಸಾ ಭಾಂಡಗೆ ಅವರ ಮನೆಯಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿಯಾಗಿದ್ದೆ. ಆದರೆ, ಯಾರೊಂದಿಗೂ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.

ವಿಜಯೇಂದ್ರ ವಿರುದ್ಧ ವೈಯಕ್ತಿಕ ಅಸಮಾಧಾನ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ಬಳಿಕವಷ್ಟೇ ಮುಂದಿನ ಮಾತುಕತೆ ಸಾಧ್ಯ ಎಂದು ಹೇಳಿರುವ ಯತ್ನಾಳ್, ವಿಜಯೇಂದ್ರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರು ವೈಯಕ್ತಿಕವಾಗಿ ತನಗೆ ಸಾಕಷ್ಟು ಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಿಜಯೇಂದ್ರ ಅವರ ತಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾವು ನೀಡಿದ್ದ ಪತ್ರಗಳನ್ನು ಹರಿದು ಹಾಕಲಾಗಿತ್ತು ಎಂದು ಹೇಳಿರುವ ಅವರು, ವಿಜಯೇಂದ್ರ ವಿರುದ್ಧ ವೈಯಕ್ತಿಕ ದ್ವೇಷವಿದೆ ಎಂದು ತಿಳಿಸಿದ್ದಾರೆ.

ತಮ್ಮ ಮತ್ತು ವಿಜಯೇಂದ್ರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿಜಯೇಂದ್ರ ಎಷ್ಟೇ ಪ್ರಚಾರ ಮಾಡಿದರೂ ಅದರಿಂದ ತನಗೆ ಯಾವುದೇ ಸಮಸ್ಯೆಯಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಆದರೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ಬಳಿಕವಷ್ಟೇ ಮುಂದಿನ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿರುವುದಾಗಿ ಯತ್ನಾಳ್ ತಿಳಿಸಿದ್ದಾರೆ. ದೆಹಲಿಯಲ್ಲಿ ಯಾವುದೇ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಉದ್ದೇಶವಿಲ್ಲ. ಕಬ್ಬು ಬೆಳೆಗಾರರ ಹೋರಾಟದ ವಿಚಾರವಾಗಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಲಿದ್ದೇನೆ. ಬಿಜೆಪಿಗೆ ಮರಳುವ ವಿಚಾರವಾಗಿ ಯಾವುದೇ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

By Reporter Desk - 21-10-2026


Ads in Post