ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಫಲ ಸಿಕ್ಕಿದೆ. ಶ್ರೀಮಂತ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಸರ್ಕಾರದ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಪ್ರಾಚೀನ ಇತಿಹಾಸದ ಜೊತೆಗೆ ಸಮೃದ್ಧ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರೆತಿರುವುದು, ತುಳುವನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ನೀಡಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿತ್ತು. ತುಳು ಸಾಹಿತ್ಯ ಅಕಾಡೆಮಿ, ವಿವಿಧ ತುಳುಪರ ಸಂಘಟನೆಗಳು, ಸಾಹಿತಿಗಳು ಹಾಗೂ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರಿದ್ದರು.
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧ್ಯತೆಗಳು, ಸಾಧಕ-ಬಾಧಕಗಳು ಹಾಗೂ ಭಾಷಾ ನೀತಿಯ ವಿವಿಧ ಅಂಶಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ವಿವಿಧ ರಾಜ್ಯಗಳ ಭಾಷಾ ನೀತಿಗಳನ್ನು ಅಧ್ಯಯನ ನಡೆಸಿ, ಈ ಕುರಿತು ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು.