Search


SIR ವಿವಾದ: ಒಗ್ಗಟ್ಟಾದ INDIA ಬಣ, ಮುಂದಿನ ಹೋರಾಟಕ್ಕೆ ರೂಪುರೇಷೆ

ನವದೆಹಲಿ: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ‘ಎಸ್‌ಐಆರ್‌’ (Special Intensive Revision) ಪ್ರಕ್ರಿಯೆ ಕುರಿತು ವಿವಾದ ಮುಂದುವರಿದಿರುವ ನಡುವೆಯೇ, ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟ ಜಂಟಿ ಹೋರಾಟಕ್ಕೆ ಸಜ್ಜಾಗಿದೆ. ಎಸ್‌ಐಆರ್ ವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುವ ಕುರಿತು ಬುಧವಾರ ಮಹತ್ವದ ಸಭೆ ನಡೆಯಲಿದೆ.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಎಡಪಕ್ಷಗಳು, ಎನ್‌ಸಿಪಿ-ಎಸ್‌ಪಿ ಹಾಗೂ ಶಿವಸೇನೆ (ಯುಬಿಟಿ) ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಮಮತಾ ಬ್ಯಾನರ್ಜಿ ಈಗಾಗಲೇ ದೆಹಲಿಗೆ ಆಗಮಿಸಿದ್ದು, ಚುನಾವಣಾ ಆಯೋಗದ ವಿಚಾರವೇ ಸಭೆಯ ಪ್ರಮುಖ ಚರ್ಚಾ ವಿಷಯವಾಗಲಿದೆ ಎಂದು ತಿಳಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳ ಸೇರ್ಪಡೆ ಹಾಗೂ ಕೈಬಿಡುವಿಕೆ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಎಸ್‌ಐಆರ್ ವಿರುದ್ಧ ಮುಂದಿನ ಹಂತದ ಹೋರಾಟಕ್ಕೆ ಕಾರ್ಯತಂತ್ರ ರೂಪಿಸುವುದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮುಂದಿನ ಕ್ರಮ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಪ್ರತಿಪಕ್ಷಗಳ ಜಂಟಿ ಪ್ರತಿಕ್ರಿಯೆ ನೀಡುವ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಲಿದ್ದಾರೆ.

ಇದಲ್ಲದೆ, ಇವಿಎಂ, ವಿವಿಪ್ಯಾಟ್ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ವಿಚಾರಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಆದರೆ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷ ಸಭೆಯಲ್ಲಿ ಭಾಗವಹಿಸುವುದಿಲ್ಲ. ಉತ್ತರ ಪ್ರದೇಶದ ರಾಜ್ಯಸಭಾ ಚುನಾವಣಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಸಭೆಗೆ ಗೈರಾಗಲಿದ್ದು, ತಮ್ಮ ಪ್ರತಿನಿಧಿಗಳನ್ನು ಕಳುಹಿಸಲಿದ್ದಾರೆ.

ಈ ನಡುವೆ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಎಡಪಕ್ಷಗಳ ಮುಖಂಡರು ಮಂಗಳವಾರ ಚುನಾವಣಾ ಆಯೋಗದ ಪ್ರಧಾನ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಿಪಿಎಂ ನಾಯಕ ಎಂ.ಎ. ಬೇಬಿ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಿಪಿಎಂ ಆರೋಪಿಸಿದ್ದು, ಎಸ್‌ಐಆರ್ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿ ವಿಚಾರದಲ್ಲಿ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

By Ravikumar - 30-09-2026


Ads in Post