ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಪ್ರಯತ್ನ ನಡೆದಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಗುರುವಾರ ಮಾತನಾಡಿದ ಅವರು, ಮುಖ್ಯಮಂತ್ರಿಯಾದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿಯೂ ಈ ಕುರಿತು ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ ಡಿಕೆಶಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳಿವೆ ಎಂದರು.
ಚರ್ಚೆಯ ನೆಪದಲ್ಲಿ ಕೆಲವರು ತಮ್ಮನ್ನು ಭೇಟಿಯಾಗಿದ್ದರು. ಅವರ ಉದ್ದೇಶದ ಬಗ್ಗೆ ಮೊದಲೇ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರ ಮೂಲಕ ಮಾಹಿತಿ ಸಂಗ್ರಹಿಸಿ, ಅಗತ್ಯ ದಾಖಲೆಗಳು ಹಾಗೂ ಫೋಟೋಗಳನ್ನು ಪಡೆದು ಇಟ್ಟುಕೊಂಡಿದ್ದೇನೆ. ಅಗತ್ಯವಿದ್ದರೆ ಅವುಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು. ಈ ಷಡ್ಯಂತ್ರದ ಹಿಂದೆ ಯಾರು ಇದ್ದಾರೆ, ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಮತ್ತು ಇದರ ಹಿಂದಿನ ಪ್ರಮುಖ ವ್ಯಕ್ತಿ ಯಾರು ಎಂಬುದೂ ತಮಗೆ ತಿಳಿದಿದೆ ಎಂದು ಅವರು ಆರೋಪಿಸಿದರು. ತಾವು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಆರೋಪ ಮಾಡುವುದಿಲ್ಲ. ತಮ್ಮ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಸ್ಪಷ್ಟಪಡಿಸಿದರು.
ಈ ರೀತಿಯ ಪ್ರಯತ್ನಗಳು ಈ ಹಿಂದೆಯೂ ನಡೆದಿದ್ದವು. ಸುಖಾಸುಮ್ಮನೆ ಟ್ರ್ಯಾಪ್ ಮಾಡಲು ಕೆಲವರು ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಹಾಗೂ ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದೇನೆ ಎಂದರು. ಈ ಪ್ರಕರಣದಲ್ಲಿ ಕರ್ನಾಟಕದವರೇ ಇದ್ದಾರೆಯೇ ಅಥವಾ ಹೊರರಾಜ್ಯದವರೇ ಭಾಗಿಯಾಗಿದ್ದಾರೆಯೇ ಎಂಬುದನ್ನು ಈಗ ಬಹಿರಂಗಪಡಿಸುವುದಿಲ್ಲ. ಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
ಎಸ್ಐಆರ್ ಫಾರ್ಮ್-7 ದುರ್ಬಳಕೆ ಆರೋಪ
ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಫಾರ್ಮ್-7 ಅನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪವನ್ನೂ ಡಿ.ಕೆ. ಶಿವಕುಮಾರ್ ಮಾಡಿದ್ದಾರೆ. ಫಾರ್ಮ್-7 ಹೇಗೆ ದುರ್ಬಳಕೆಯಾಗಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೆಹಲಿಗೆ ತಂದಿದ್ದು, ಕಾಂಗ್ರೆಸ್ ವರಿಷ್ಠರ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಪ್ರಕರಣದಲ್ಲಿ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ಅಕ್ರಮದ ಬಗ್ಗೆ ತನಿಖೆ ನಡೆಯಬೇಕು ಎಂದು ಶಿವಕುಮಾರ್ ಹೇಳಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿದ್ದ ಕೆಲವು ನಾಯಕರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ತಮ್ಮ ಹೆಸರು ಬಹಿರಂಗವಾಗುವ ಭಯದಿಂದ ಕೆಲವರು ತನಿಖೆಗೆ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು
ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಜಿಎಸ್ಟಿ ಸಭೆಗೆ ಇಂದು ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಅಗತ್ಯವಿರುವ ಮಾಹಿತಿಯನ್ನು ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಡಿಕೆಶಿ ಹೇಳಿಕೆಗೆ ವಿಜಯೇಂದ್ರ ತಿರುಗೇಟು
ಇದೇ ವೇಳೆ ಸಚಿವರ ಸ್ಟಿಂಗ್ ಆಪರೇಷನ್ ಕುರಿತು ಡಿ.ಕೆ. ಶಿವಕುಮಾರ್ ನೀಡಿರುವ ಎಚ್ಚರಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಯಾರು ಸ್ಟಿಂಗ್ ಆಪರೇಷನ್ ಮಾಡಿದ್ದಾರೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ. ತಮ್ಮ ಶಾಸಕರ ಮೇಲೆಯೇ ಸ್ಟಿಂಗ್ ಮಾಡಲಾಗುತ್ತಿದೆಯೇ ಅಥವಾ ‘ಡಿಂಗ್ ಡಿಂಗ್ ಆಪರೇಷನ್’ ನಡೆಸಿದವರು ಯಾರು ಎಂಬುದೂ ಜನರಿಗೆ ತಿಳಿದಿದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.