ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ತಾವು ಹಂಚಿಕೊಂಡಿದ್ದ ತಡರಾತ್ರಿ ವಿಡಿಯೋಗೆ ಭಾರೀ ಬೆಂಬಲ ವ್ಯಕ್ತಪಡಿಸಿದ ದೇಶದ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಹೊಸ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, "ಸ್ನೇಹಿತರೇ, ನಿನ್ನೆ ರಾತ್ರಿ ನಿಮ್ಮೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತ್ತು. ಆ ವಿಡಿಯೋಗೆ ನೀವು ನೀಡಿದ ಅದ್ಭುತ ಪ್ರತಿಕ್ರಿಯೆ, ಕಳುಹಿಸಿದ ಸಕಾರಾತ್ಮಕ ಹಾಗೂ ಮೌಲ್ಯಯುತ ಸಲಹೆಗಳಿಗೆ ಹೃತ್ಪೂರ್ವಕ ಧನ್ಯವಾದಗಳು" ಎಂದು ಹೇಳಿದ್ದಾರೆ. ಜೊತೆಗೆ ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನನಗೆ ಶಕ್ತಿ. ನಮ್ಮ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಲಿದೆ" ಎಂದು ಪ್ರಧಾನಿ ಹೇಳಿದ್ದಾರೆ.
ಈ ವಿಡಿಯೋಗೆ ಮುನ್ನ ಪ್ರಧಾನಿ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ, ಫಾಸ್ಟ್ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಹಾಗೂ ಹೊಸ ಕಠಿಣ ಕಾನೂನು ತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಯುವಕರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯುವಕರಿಂದ ಬಂದಿರುವ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.