Search


ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ರೆಗ್ಯುಲರ್ ಜಾಮೀನು ಮಂಜೂರು

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ವಿಧಿಸಿ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ವಚನಾನಂದ ಸ್ವಾಮೀಜಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿ, ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಜೂನ್ 27ರಂದು ಸ್ವಾಮೀಜಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಹಾಗೂ ವಚನಾನಂದ ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ್ ತಮ್ಮ ವಾದಗಳನ್ನು ಮಂಡಿಸಿದ್ದರು. ಉಭಯಪಕ್ಷಗಳ ವಾದವನ್ನು ಆಲಿಸಿದ ನ್ಯಾಯಾಲಯ ಜುಲೈ 6ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ಕೆಲವು ಷರತ್ತುಗಳೊಂದಿಗೆ ರೆಗ್ಯುಲರ್ ಜಾಮೀನು ನೀಡಿದೆ.

ಪ್ರಕರಣದಲ್ಲಿ ಇದುವರೆಗೆ ಏಳು ಮಕ್ಕಳ ಹೇಳಿಕೆಗಳನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಕ್ಕಳನ್ನು ಸ್ನಾನದ ಕೊಠಡಿ ಮತ್ತು ಮಲಗುವ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ವಿರುದ್ಧ ದಾಖಲಾಗಿದೆ. ಈ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

ಗಮನಾರ್ಹವಾಗಿ, ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಲಾಗಿತ್ತು ಎಂಬುದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣ ದಾಖಲಾಗುವ ಮುನ್ನ ನಿರೀಕ್ಷಣಾ ಜಾಮೀನು ನೀಡಿರುವುದು ಕಾನೂನುಬದ್ಧವಾಗಿ ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟು, ಆ ಜಾಮೀನನ್ನು ರದ್ದುಪಡಿಸಿತ್ತು. ಜೊತೆಗೆ, ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದ್ದ ಹೈಕೋರ್ಟ್, ಆ ಅವಧಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸಿತ್ತು. ಪ್ರಕರಣದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಮುಂದುವರಿದಿದ್ದು, ಆರೋಪಗಳ ಕುರಿತು ಅಂತಿಮ ತೀರ್ಪು ಹೊರಬೀಳಬೇಕಿದೆ.

By Ravikumar - 13-07-2026


Ads in Post