ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆ ನಿರ್ಧರಿಸಿದೆ. ಈ ಕುರಿತು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಇದ್ದ ಸೆಲ್ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಕುರಿತು ಅಲ್ಲಿನ ಜೈಲು ಅಧಿಕಾರಿಗಳಿಗೆ ಅಧಿಕೃತ ಇ-ಮೇಲ್ ಮೂಲಕ ಮಾಹಿತಿ ನೀಡಲಾಗಿದೆ. ಅಲ್ಲದೆ, ಜೈಲು ಮುಖ್ಯ ಅಧೀಕ್ಷಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಸ್ಥಳಾಂತರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಇತ್ತೀಚೆಗೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ವಿಚಾರಣಾಧೀನ ಕೈದಿಯ ಬಳಿ ಮೊಬೈಲ್ ಫೋನ್ ಮತ್ತು ಪೆನ್ಡ್ರೈವ್ ಪತ್ತೆಯಾಗಿದ್ದವು. ಈ ಬೆಳವಣಿಗೆ ಜೈಲಿನ ಭದ್ರತಾ ವ್ಯವಸ್ಥೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ದಾಳಿಯ ವೇಳೆ ಪೊಲೀಸರು ಮೊಬೈಲ್ ಫೋನ್ಗಳು, ಚಾರ್ಜರ್, ಪೆನ್ಡ್ರೈವ್ ಹಾಗೂ ನೋಟ್ಬುಕ್ಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಯಾವುದೇ ಸಮಯದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆಯಿದ್ದು, ಅದಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.