ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ದೇಶವ್ಯಾಪಿ ವಿದ್ಯಾರ್ಥಿ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ ಬಳಿಕ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಈ ನೇಮಕಾತಿ ನಡೆದಿದೆ.
ಪ್ರಲ್ಹಾದ್ ಜೋಶಿ ಅವರು ಈಗಾಗಲೇ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಇದೀಗ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಲಿದ್ದಾರೆ. ಕಳೆದ ಕೆಲವು ವಾರಗಳಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗಳ ತೀವ್ರತೆಯ ನಡುವೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಹೊಸ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿಯನ್ನು ನೇಮಿಸಿದೆ.
ಹೊಸ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ವಹಿಸಿಕೊಳ್ಳುವ ಮೂಲಕ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಸುಧಾರಣೆ ಹಾಗೂ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸುವ ಸವಾಲನ್ನು ಎದುರಿಸಲಿದ್ದಾರೆ. ಜೊತೆಗೆ ಈಗಾಗಲೇ ಶಿಕ್ಷಣ ಇಲಾಖೆಗೆ ಅಂಟಿಕೊಂಡಿರುವ ಕಳಂಕವನ್ನು ತೊಡೆದು ಹಾಕಲು ಜೋಶಿ ಮಹತ್ವದ ಕೆಲಸಗಳನ್ನ ಮಾಡಬೇಕಿದೆ.