ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 6ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಅಕ್ಟೋಬರ್ 6ರಂದು ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಅಕ್ಟೋಬರ್ 7ರಂದು ಎಲ್ಲೆಲ್ಲಿ ಮಳೆ?
ಅಕ್ಟೋಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.
ಕರ್ನಾಟಕದಲ್ಲಿ ಮುಂಗಾರು ಸ್ಥಿತಿ
ರಾಜ್ಯದಲ್ಲಿ ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ.
ಸೋಮವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ ವೀಕ್ಷಣಾಲಯದಲ್ಲಿ 11 ಸೆಂ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 8 ಸೆಂ.ಮೀ., ಮಂಗಳೂರು ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಸೆಂ.ಮೀ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್ಎಂಎಸ್ನಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ.