ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ವಿದ್ಯುತ್ ಪೂರೈಕೆಯಲ್ಲೂ ತಾತ್ಕಾಲಿಕ ವ್ಯತ್ಯಯ ಉಂಟಾಗಬಹುದು. ಬಲವಾದ ಗಾಳಿಯಿಂದ ದುರ್ಬಲ ಮರಗಳು ಹಾಗೂ ಮರದ ಕೊಂಬೆಗಳು ಮುರಿದು ಬೀಳುವ ಅಪಾಯವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.