ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಬಳ್ಳಾರಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ವೇಳೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲೂ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಮಂಗಳವಾರ ಸಂಜೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮುಂಗಾರು ಸಾಮಾನ್ಯವಾಗಿತ್ತು. ಆದರೆ ಕರಾವಳಿ ಮತ್ತು ಉತ್ತರ ಒಳನಾಡು ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿತ್ತು. ರಾಜ್ಯದ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯ ಒಂದೆರಡು ಕಡೆ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ. ಹಿಲ್ಸ್ನಲ್ಲಿ 9 ಸೆಂ.ಮೀ ಹಾಗೂ ಬೆಂಗಳೂರು ನಗರದ ಎಚ್ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.