Search


ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ : ಡಿಕೆಶಿಗೆ ಆರಂಭಿಕ ಶಾಕ್‌..!

ಬೆಂಗಳೂರು : ಎರಡು ದಿನಗಳ ಹಿಂದಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ರಾಮಲಿಂಗ ರೆಡ್ಡಿಯವರು ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ದಿ ಖಾತೆಗೆ ರಾಮಲಿಂಗ ರೆಡ್ಡಿಯವರು ಬೇಡಿಕೆ ಇಟ್ಟಿದ್ದರು, ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಬೇಡಿಕೆಯನ್ನ ನಿರಾಕರಿಸಿ, ಜಲ ಸಂಪನ್ಮೂಲ ಇಲಾಖೆ ನೀಡಿರುವುಕ್ಕೆ ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ. ಈ ವಿಚಾರ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ಮುಂದುವರಿದು ಮಾತನಾಡಿದ ರಾಮಲಿಂಗ ರೆಡ್ಡಿಯವರು "ನನಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಾಗಲಿ ಅಥವಾ ಸಿದ್ದರಾಮಯ್ಯ ಅವರ ಮೇಲಾಗಲಿ ಯಾವುದೇ ವೈಯಕ್ತಿಕ ಕೋಪವಿಲ್ಲ. ನಾನು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂಬ ಸತ್ಯ ಜನರಿಗೆ ಗೊತ್ತಾಗಬೇಕಷ್ಟೇ. ನಾನು ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ. ನನ್ನ ಜೀವನದಲ್ಲಿ ಎಂದಿಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ನುಡಿದರು.
 

By Ravikumar - 05-06-2026


Ads in Post